ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯನ್ವಯ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಮುಂಬರುವ ದಿನಗಳಲ್ಲೂ ಭೀಕರ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತುರ್ತು ಆದೇಶವೊಂದನ್ನು ಹೊರಡಿಸಿದೆ.
ಈ ಅದೇಶದ ಅನ್ವಯ, ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಜುಲೈ 2, 2026ರ ಗುರುವಾರದಂದು ಸಂಪೂರ್ಣ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಯಿಂದಾಗಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಡಳಿತ ವಿನಂತಿಸಿದೆ. ಮಕ್ಕಳು ಯಾವುದೇ ಕಾರಣಕ್ಕೂ ನೀರು ತುಂಬಿದ ತಗ್ಗು ಪ್ರದೇಶಗಳು, ಕೆರೆ, ನದಿ ಪಾತ್ರಗಳು ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಇದೇ ವೇಳೆ, ಕಡಲ ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಡಕ್ ಎಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಕೂಡ ನದಿ ಮತ್ತು ಸಮುದ್ರ ತೀರದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಎಲ್ಲಾ ಉನ್ನತಾಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನಗಳಲ್ಲೇ ಮೊಕ್ಕಾಂ ಹೂಡಬೇಕೆಂದು ಆದೇಶಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣವೇ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ಅನಾಹುತಗಳನ್ನು ಎದುರಿಸಲು ಪ್ರತಿ ತಾಲೂಕಿನಲ್ಲಿ ತಕ್ಷಣವೇ ಕಾಳಜಿ ಕೇಂದ್ರಗಳನ್ನು (ಪುನರ್ವಸತಿ ಕೇಂದ್ರ) ತೆರೆದು ಸನ್ನದ್ಧ ಸ್ಥಿತಿಯಲ್ಲಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಆದೇಶಿಸಲಾಗಿದ್ದು, ಸಾರ್ವಜನಿಕರು ತುರ್ತು ನೆರವಿಗಾಗಿ ಜಿಲ್ಲಾಡಳಿತದ ಅಧಿಕೃತ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು










