ಮಂಗಳೂರು : ಮಂಗಳೂರು ತಾಲೂಕಿನಾದ್ಯಂತ ಇರುವ ಎಲ್ಲಾ ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯತ್ಗಳು, ಆರೋಗ್ಯ ಕೇಂದ್ರಗಳು ಸೇರಿದಂತೆ ಮಹಿಳೆಯರು ಕೆಲಸ ಮಾಡುವ ಪ್ರತಿಯೊಂದು ಕಚೇರಿಗಳಲ್ಲಿ ಕಡ್ಡಾಯವಾಗಿ ಸುರಕ್ಷಿತ ವಾತಾವರಣವನ್ನು ನಿರ್ಮಿಸಬೇಕಿದೆ. ಉದ್ಯೋಗಸ್ಥ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳವನ್ನು ತಡೆಗಟ್ಟುವ ಉದ್ದೇಶದಿಂದ ಆಯಾ ಸಂಸ್ಥೆಗಳಲ್ಲಿ ತಕ್ಷಣವೇ ನಿಯಮಾನುಸಾರ ‘ಪೋಶ್’ (POSH) ಸಮಿತಿಗಳನ್ನು ಅಸ್ತಿತ್ವಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ತಾಲೂಕು ಕಚೇರಿಯಲ್ಲಿ ಶನಿವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಮಹತ್ವದ ನಿರ್ದೇಶನ ನೀಡಿದರು.
ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಸಬಲೀಕರಣಕ್ಕೆ ಸಂಬಂಧಿಸಿದ ಬೇಟಿ ಬಚಾವೋ ಬೇಟಿ ಪಡಾವೋ, ಸುಧಾರಿತ ಮಾತ್ರವಂದನ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ, ಮಾದಕ ವಸ್ತು ನಿಯಂತ್ರಣ ಮತ್ತು ವ್ಯಸನ ನಿಷೇಧ ಸಮಿತಿಗಳ ಕಾರ್ಯವೈಖರಿಯನ್ನು ಪರಾಮರ್ಶಿಸಲಾಯಿತು. ಇದರೊಂದಿಗೆ ಅಂಗವಿಕಲರ ಕುಂದುಕೊರತೆ ನಿವಾರಣೆ, ಬಾಲ್ಯ ವಿವಾಹ ನಿಷೇಧ, ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಅಕ್ರಮ ಸಾಗಾಣಿಕೆ ತಡೆ ಸಮಿತಿಗಳ ಪ್ರಗತಿಯ ಬಗ್ಗೆಯೂ ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಪಡೆದು ಚರ್ಚಿಸಲಾಯಿತು.
ಕಳೆದ ಮೂರು ತಿಂಗಳ ಅವಧಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 4 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 3 ಪ್ರಕರಣಗಳು ಪ್ರಸ್ತುತ ಸಮಾಲೋಚನೆ (ಕೌನ್ಸಿಲಿಂಗ್) ಹಂತದಲ್ಲಿವೆ ಎಂದು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ. ಅವರು ಸಭೆಯ ಗಮನಕ್ಕೆ ತಂದರು. ಅಲ್ಲದೆ, ಸಮಾಜಕ್ಕೆ ಕಂಟಕವಾಗಿರುವ ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಮಾರಾಟದ ವಿರುದ್ಧ ಜಾಗೃತಿ ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರ ವಲಯ ಮಟ್ಟದ ಸಭೆಗಳು, ಸ್ತ್ರೀ ಶಕ್ತಿ ಸಂಘಟನೆಗಳ ಒಕ್ಕೂಟ ಹಾಗೂ ಅಂಗನವಾಡಿಗಳಲ್ಲಿ ಆಯೋಜಿಸಲಾಗುವ ತಾಯಂದಿರ ಸಭೆಗಳನ್ನು ಬಳಸಿಕೊಂಡು ನಿರಂತರ ಮಾಹಿತಿ ನೀಡಲಾಗುತ್ತಿದೆ ಎಂದು ವಿವರಿಸಿದರು. ಈ ಮಹತ್ವದ ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










