ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ದಿನಾಂಕ 01.08.2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (೧೨ನೇ ತರಗತಿಯವರೆಗೆ) ಮತ್ತು ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಶಾಲೆ ಮತ್ತು ಕಾಲೇಜುಗಳು ಸೇರಿದಂತೆ) ರಜೆ ಘೋಷಿಸಿ ಆದೇಶಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಅಡಿಯಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತವು ಹಲವು ತುರ್ತು ಮಾರ್ಗದರ್ಶಿ ಸೂಚಿಗಳನ್ನು ಬಿಡುಗಡೆ ಮಾಡಿದೆ. ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪೋಷಕರು ಕಟ್ಟುನಿಟ್ಟಿನ ಜಾಗ್ರತೆ ವಹಿಸಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಸಮುದ್ರ ಕೊರೆತ ಹಾಗೂ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಕ್ಕೆ ತೆರಳಬಾರದೆಂದು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕರ್ತವ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸಾರ್ವಜನಿಕರ ದೂರುಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರತಿ ತಾಲೂಕಿನಲ್ಲೂ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತುರ್ತು ನೆರವಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0824-2442590 ಸಂಪರ್ಕಿಸುವಂತೆ ಕೋರಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










