ಕಾಪು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಕರಾವಳಿ ಭಾಗಕ್ಕೆ ನಿರಂತರವಾಗಿ ತೋರುತ್ತಿರುವ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಆ.8ರ ಶನಿವಾರ ಕಾಪು ಪೇಟೆಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಿತ್ತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಾವು ರಾಜಕೀಯವನ್ನು ವೃತ್ತಿಯನ್ನಾಗಿ ನೋಡದೆ ವ್ರತದಂತೆ ಸ್ವೀಕರಿಸಿ ಕ್ಷೇತ್ರದ ಪಾಲನೆ ಮಾಡುತ್ತಿರುವುದಾಗಿ ತಿಳಿಸಿದರು. ಮಾಜಿ ಸಚಿವರ ವೃಥಾರೋಪಗಳಿಗೆ ತಿರುಗೇಟು ನೀಡಿದ ಅವರು, ನೀಟ್ ಹಾಗೂ ಅಯೋಧ್ಯೆ ಕುರಿತು ಮಾತನಾಡುವ ಕಾಂಗ್ರೆಸ್ ನಾಯಕರು ಕೇರಳದ ಶಬರಿಮಲೆ ಮತ್ತು ಅನಂತಪದ್ಮನಾಭ ದೇವಸ್ಥಾನಗಳ ಅವ್ಯವಹಾರ, ಚಿನ್ನ ಕಳವು ಪ್ರಕರಣಗಳು ಹಾಗೂ ರಾಜ್ಯದಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಏಕ ಮುಖಮುಚ್ಚಿಕೊಂಡಿದ್ದಾರೆ ಎಂದು ಪ್ರಶ್ನಿಸಿ, ಕರಾವಳಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಧ್ವನಿ ಎತ್ತಿದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಡಗಬೆಟ್ಟುವಿನಲ್ಲಿ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳ ಆಯೋಜಿಸಲು ಮುಂದಾದ ಶಾಸಕ ಸುರೇಶ್ ಶೆಟ್ಟಿ, ಸಂಸದರು ಹಾಗೂ ಶಾಸಕರು ಸೇರಿದಂತೆ 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲು ರಾಜಕೀಯ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದರು. ಇದೇ ವೇಳೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಮೀನುಗಾರ ಸಮುದಾಯದ ಮಾಂಕಾಳ ವೈದ್ಯ ಹಾಗೂ ಶಾಂತಾ ಗೌಡ ಅವರನ್ನು ಸಂಪುಟದಿಂದ ಕೈಬಿಡುವ ಮೂಲಕ ಕಾಂಗ್ರೆಸ್ ತಳಮಟ್ಟದ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದರು. ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಮಾಜಿ ಸಚಿವ ಸುನೀಲ್ ಕುಮಾರ್ ಅವರು ಮಾತನಾಡಿ, ಕರಾವಳಿಗೆ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ನೀಡದ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ವಿರುದ್ಧ ಅಪಪ್ರಚಾರ ಹಾಗೂ ವರ್ಗಾವಣೆ ದಂಧೆಯಲ್ಲಿ ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಶಾಸಕರಾದ ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಲಿ, ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಮಟ್ಟಾರು ರತ್ನಾಕರ ಹೆಗ್ಡೆ, ದಿನಕರ ಬಾಬು ಸೇರಿದಂತೆ ಹಲವು ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜೀತೇಂದ್ರ ಶೆಟ್ಟಿ ಉದ್ಯಾವರ ಪ್ರಾಸ್ತಾವಿಕವಾಗಿ ಸ್ವಾಗತಿಸಿ, ಕುತ್ಯಾರು ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ಶರಣ್ ಮಟ್ಟು ಧನ್ಯವಾದ ಸಮರ್ಪಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









