ಬಂಟ್ವಾಳ : ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಬಿಜೆಪಿಯನ್ನು ಹತೋಟಿಗೆ ತರಲು ಹುನ್ನಾರ ನಡೆಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಸತತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಏಕಪಕ್ಷೀಯ ನಡವಳಿಕೆಗಳು ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಗೆ ಭಂಗ ತರುವ ಸಾಧ್ಯತೆ ಇರುವುದರಿಂದ, ಸರ್ಕಾರ ಮತ್ತು ಪೋಲಿಸ್ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಾನೂನುಬದ್ಧವಾಗಿ ನಡೆದುಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ಸಂಘಟನೆಗಳು ಅಥವಾ ಯಾವುದೇ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ನಿಷ್ಪಕ್ಷಪಾತವಾಗಿ ನಿಯಮಗಳನ್ನು ಪಾಲಿಸಬೇಕು. ಸುಳ್ಳು ಪ್ರಕರಣಗಳ ಮೂಲಕ ಕಾರ್ಯಕರ್ತರನ್ನು ಕಿರುಕುಳಕ್ಕೊಳಪಡಿಸಿದರೆ ಜಿಲ್ಲೆಯ ಜನತೆಯೇ ಅನ್ಯಾಯದ ವಿರುದ್ಧ ಒಗ್ಗೂಡಿ ಬೀದಿಗೆ ಇಳಿಯುವ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರಿಗೆ ಪೊಲೀಸರು ನೋಟಿಸ್ ನೀಡಿರುವುದನ್ನು ಸಹ ಅವರು ಈ ಸಂದರ್ಭದಲ್ಲಿ ಖಂಡಿಸಿದ್ದಾರೆ.
ಈ ಎಲ್ಲಾ ಅನ್ಯಾಯಗಳ ವಿರುದ್ಧ ಧ್ವನಿ ಎತ್ತಲು ಸೆಪ್ಟೆಂಬರ್ 28ರ ಸೋಮವಾರದಂದು ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. ಈ ಹೋರಾಟವನ್ನು ಯಶಸ್ವಿಗೊಳಿಸಲು ಬಿಜೆಪಿ ಹಾಗೂ ಹಿಂದುತ್ವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶಾಸಕರು ವಿನಂತಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









