ಮಂಗಳೂರು : ಮಂಗಳೂರಿನ ರಾಜಾಜಿ ಉದ್ಯಾನವನದಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಶ್ರದ್ಧಾಭಕ್ತಿ ಹಾಗೂ ಗೌರವಗಳೊಂದಿಗೆ ನೆರವೇರಿಸಲಾಯಿತು. ಸಮಾರಂಭದಲ್ಲಿ ಉಪಸ್ಥಿತರಿದ್ದ ಗಣ್ಯರು ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಖಾದಿ ಮಾಲೆ ತೊಡಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಗೌರವಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗಾಂಧೀಜಿಯವರ ಆದರ್ಶಮಯ ಜೀವನವೇ ಜಗತ್ತಿಗೆ ದೊಡ್ಡ ಮಾದರಿಯಾಗಿದೆ. ಪ್ರತಿಯೊಬ್ಬರ ಅನಿಸಿಕೆಗಳನ್ನು ಸಹನೆಯಿಂದ ಆಲಿಸಿ, ವ್ಯಕ್ತಿತ್ವಕ್ಕೆ ಮೌಲ್ಯ ನೀಡುತ್ತಿದ್ದ ಅವರ ಗುಣವೇ ಅವರನ್ನು ಭಾರತದ ಮಹಾನ್ ನಾಯಕನನ್ನಾಗಿ ರೂಪಿಸಿತು ಎಂದರು. ಇದೇ ವೇಳೆ ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹೀದ್, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಹಾಗೂ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರು ತಮ್ಮ ವಿಚಾರಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಭಾಗವಾಗಿ ಸರ್ವಧರ್ಮ ಪ್ರಾರ್ಥನೆ ನಡೆದು, ಗಾಂಧೀಜಿಯವರ ಪ್ರೀತಿಯ ‘ರಘುಪತಿ ರಾಘವ ರಾಜಾರಾಮ್’ ಹಾಗೂ ‘ವೈಷ್ಣವ ಜನತೋ’ ಭಜನೆಗಳನ್ನು ಗಾಯನ ಮಾಡಲಾಯಿತು. ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರಕಟಿಸಲಾದ ಗಾಂಧಿ ಜಯಂತಿಯ ವಿಶೇಷ ನಿಯತಕಾಲಿಕೆಗಳನ್ನು ಬಿಡುಗಡೆಗೊಳಿಸಲಾಯಿತು. ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯ ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ-ಸ್ನಾತಕೋತ್ತರ ವಿಭಾಗದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕೆ., ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಡಿಸಿಪಿ ಸ್ಯಾಮ್ ವರ್ಗಿಸ್, ಡಿಡಿಪಿಐ ಶಶಿಧರ್, ಭಾರತ್ ಸೇವಾದಳದ ಮುಖಂಡರಾದ ಬಶೀರ್ ಬೈಕಂಪಾಡಿ, ಟಿ. ಕೆ. ಸುಧೀರ್ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಕಾರ್ಯಕ್ರಮಕ್ಕೆ ಆಗಮಿಸಿದ್ದವರನ್ನು ಸ್ವಾಗತಿಸಿದರೆ, ಸೈದುದ್ದೀನ್ ನಿರೂಪಣೆ ನಿರ್ವಹಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









