ಉಡುಪಿ : ಪ್ರದೀಪ್ ಪೂಜಾರಿ ಅವರ ಮೇಲಿನ ಭೀಕರ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (ಎಸ್ಪಿ) ಹರಿರಾಮ್ ಶಂಕರ್ ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ವಿವರಣೆ ನೀಡಿರುವ ಎಸ್ಪಿ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೂಲಂಕುಷ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪಶ್ಚಿಮ ವಲಯ ಡಿಐಜಿ ಅವರಿಗೆ ರವಾನಿಸಲಾಗಿದ್ದು, ಅದರನ್ವಯ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಶ್ಚಿಮ ವಲಯ ಡಿಐಜಿ ಕಚೇರಿಗೆ ನಿಯೋಜಿಸಿ ಅವರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ.
ಇದಲ್ಲದೆ, ಸಂತ್ರಸ್ತರು ದಾಖಲಾಗಿದ್ದ ಆಸ್ಪತ್ರೆಯಲ್ಲಿ ಕಾವಲು ಕರ್ತವ್ಯಕ್ಕಾಗಿ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ತಮ್ಮ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೀಡಿರುವ ತನಿಖಾ ವರದಿಯ ಆಧಾರದ ಮೇಲೆ ಆ ಇಬ್ಬರೂ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಅಮಾನತು ಶಿಕ್ಷೆಗೆ ಒಳಗಾಗಿರುವ ಸಿಬ್ಬಂದಿಯ ವಿರುದ್ಧವೂ ಸೂಕ್ತ ಇಲಾಖಾ ಶಿಸ್ತು ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









