ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮಂಗಳೂರು ವಿಭಾಗದ ವತಿಯಿಂದ ನಗರದ ಕದ್ರಿ ಮೈದಾನದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ-ಅರಾಜಕತೆ ಅಳಿಸಿ’ ಎಂಬ ಬೃಹತ್ ಪಾದಯಾತ್ರೆ ಮತ್ತು ಸಾರ್ವಜನಿಕ ಸಮಾವೇಶ ಶುಕ್ರವಾರ ನಡೆಯಿತು. ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಸುರೇಶ್ ಗೋಪಿ, ದೇಶದ ಸಾಂವಿಧಾನಿಕ ಮೌಲ್ಯಗಳು, ಪ್ರಗತಿ ಹಾಗೂ ಸನಾತನ ಧರ್ಮದ ರಕ್ಷಣೆಗಾಗಿ ಆಡಳಿತಾರೂಢ ಬಿಜೆಪಿ ಪಕ್ಷವೇ ಬೀದಿಗಿಳಿದು ಹೋರಾಟ ಮಾಡುವ ಸ್ಥಿತಿ ಎದುರಾಗಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ಮುಖಂಡರ ಹೇಳಿಕೆಗಳನ್ನು ಖಂಡಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶ ಬೆಂಬಲಿಸುತ್ತಿದ್ದು, ಅಭಿವೃದ್ಧಿಗೆ ಅಡ್ಡಿಪಡಿಸುವ ಕಾಂಗ್ರೆಸ್ನ ನಡೆಯು ದೇಶದ ಯುವಜನತೆಯ ಭವಿಷ್ಯಕ್ಕೆ ಕಂಟಕವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಕಾಂಗ್ರೆಸ್ ಪಕ್ಷವು ದೇಶದ ಚುನಾವಣಾ ವ್ಯವಸ್ಥೆ ಹಾಗೂ ಚುನಾವಣಾ ಆಯೋಗದ ಮೇಲಿನ ಜನವಿಶ್ವಾಸವನ್ನು ಕುಸಿಯುವಂತೆ ಮಾಡಲು ಸುಳ್ಳು ಪ್ರಚಾರದ ಹಾದಿ ಹಿಡಿದಿದೆ ಎಂದು ಆರೋಪಿಸಿದರು. ಜಗತ್ತಿನಾದ್ಯಂತ ಯುದ್ಧದ ವಾತಾವರಣವಿದ್ದರೂ ಭಾರತವು ಶೇ. ೭ರಿಂದ ೮ರಷ್ಟು ಜಿಡಿಪಿ ದರದೊಂದಿಗೆ ಪ್ರಗತಿ ಸಾಧಿಸುತ್ತಿದೆ. ಬಾಂಗ್ಲಾದೇಶದ ಮಾದರಿಯಲ್ಲಿ ಭಾರತದಲ್ಲೂ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹವಣಿಸುತ್ತಿದೆ. ಆದರೆ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶವಾಗಿ ಮುನ್ನಡೆಯುತ್ತಿದೆಯೇ ಹೊರತು ಅರಾಜಕತೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಪಕ್ಷದ ಇವಿಎಮ್ ಮತ್ತು ಎಸ್ಐಆರ್ ಮೇಲಿನ ಗೊಂದಲಕಾರಿ ಹೇಳಿಕೆಗಳಿಗೆ ವಿರುದ್ಧವಾಗಿ ಐದು ನೇರ ಪ್ರಶ್ನೆಗಳನ್ನು ಎಸೆದ ತೇಜಸ್ವಿ ಸೂರ್ಯ, ೨೦೧೪, ೨೦೧೯ ಹಾಗೂ ೨೦೨೪ರ ಚುನಾವಣೆಗಳಲ್ಲಿ ಬಿಜೆಪಿಯ ಗೆಲುವನ್ನು ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಾಗದೆ ನೆಪಗಳನ್ನು ಹುಡುಕುತ್ತಿದೆ ಎಂದರು. ಕಾಂಗ್ರೆಸ್ ಇತರ ರಾಜ್ಯಗಳಲ್ಲಿ ಸೋತಾಗ ಹಾಗೂ ಬಿಜೆಪಿ ಗೆದ್ದಾಗ ಮಾತ್ರ ಇವಿಎಮ್ ಮೇಲೆ ಅನುಮಾನ ವ್ಯಕ್ತಪಡಿಸುವುದು ಅವರ ದುರುದ್ದೇಶವನ್ನು ತೋರಿಸುತ್ತದೆ ಎಂದು ಟೀಕಿಸಿದರು. ಜೊತೆಗೆ, ಒಂದೇ ವಿಳಾಸದಲ್ಲಿ ಸಂಬಂಧವಿಲ್ಲದ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ದಾಖಲೆಗಳನ್ನು ಪ್ರದರ್ಶಿಸಿದ ಅವರು, ಈ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಸೂಕ್ತ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.
ಈ ಸಮಾವೇಶದಲ್ಲಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಉಮಾನಾಥ್ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳಿ, ಹರೀಶ್ ಪೂಂಜ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಪ್ರಮುಖ ನಾಯಕರು ಮತ್ತು ಮಾಜಿ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಭೆಯನ್ನು ಸ್ವಾಗತಿಸಿದರೆ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಧನ್ಯವಾದ ಸಮರ್ಪಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









