ಮಂಗಳೂರು: ಸ್ಥಳೀಯ ಭಾಷೆಗಳ ಉತ್ತಮ ಸಾಹಿತ್ಯವು ಇಂಗ್ಲಿಷ್ನಂತಹ ಜಾಗತಿಕ ಭಾಷೆಗಳಿಗೆ ಭಾಷಾಂತರಗೊಂಡಾಗ ಮಾತ್ರ ನಮ್ಮ ನೆಲದ ಸಾಂಸ್ಕೃತಿಕ ಮೌಲ್ಯಗಳು ಹಾಗೂ ಭಾಷಾ ಸಂಪತ್ತು ಇಡೀ ಜಗತ್ತಿಗೆ ಪರಿಚಯವಾಗಲು ಸಾಧ್ಯ ಎಂದು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ಎಸ್. ರಾವ್ ಅಭಿಪ್ರಾಯಪಟ್ಟರು.
ನಗರದ ಪಾದುವ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳುವಿನಿಂದ ಇಂಗ್ಲಿಷ್ಗೆ ಅನುವಾದಿಸಿರುವ ಮಕ್ಕಳಿಗಾಗಿ ತುಳುನಾಡಿನ ಜನಪದ ಕಥೆಗಳ ಸರಣಿಯ ಐದು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ತುಳುನಾಡಿನ ವಿಶಿಷ್ಟ ಜನಪದ ಕಥೆಗಳನ್ನು ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಮತ್ತು ಮುಂದಿನ ಪೀಳಿಗೆಗೆ ಈ ಪರಂಪರೆಯನ್ನು ದಾಟಿಸುವ ಸದುದ್ದೇಶದಿಂದ ಈ ಕೃತಿಗಳ ಇಂಗ್ಲಿಷ್ ಆವೃತ್ತಿಗಳನ್ನು ಹೊರತರಲಾಗಿದೆ ಎಂದು ವಿವರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಾದುವ ಕಾಲೇಜಿನ ಪ್ರಾಂಶುಪಾಲ ವಂ. ಅರುಣ್ ವಿಲ್ಸನ್ ಲೋಬೊ ಮಾತನಾಡಿ, ಇಂದಿನ ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಮತ್ತು ಸಾಹಿತ್ಯದ ಬಗೆಗಿನ ಒಲವನ್ನು ಹೆಚ್ಚಿಸಲು ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವ ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ಪಾದುವ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರೋಸಿನ ಫ್ಲಾರೆನ್ಸ್ ಡಿಸೋಜ, ಪೋಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಮಮತಾ ಹಾಗೂ ವಿದ್ಯಾರ್ಥಿ ಪ್ರತಿನಿಧಿ ವೈಷ್ಣವಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತುಳು ಅಕಾಡೆಮಿ ಸದಸ್ಯೆ ಅಕ್ಷಯ ಆರ್. ಶೆಟ್ಟಿ ಸ್ವಾಗತ ಕೋರಿದರು. ಜಯಂತ್ ಕಾರ್ಯಕ್ರಮ ನಿರೂಪಿಸಿದರೆ, ಐಶ್ವರ್ಯ ವಂದನಾರ್ಪಣೆ ಸಲ್ಲಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









