ಸುಬ್ರಹ್ಮಣ್ಯ : ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಚಿನ್ನದ ರಥ ಸಮರ್ಪಿಸಬೇಕೆಂಬ ಭಕ್ತರ ಬಹುದಿನಗಳ ಆಶಯವನ್ನು ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದರು.
ನವೆಂಬರ್ 17ರಂದು ಕುಟುಂಬ ಸದಸ್ಯರೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು, ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ತದನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಅವರು, ತಾವು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಕುಕ್ಕೆ ದೇಗುಲಕ್ಕೆ ಸ್ವರ್ಣ ರಥ ನಿರ್ಮಿಸುವ ಕುರಿತು ಯೋಜನೆ ರೂಪಿಸಲಾಗಿತ್ತು. ಕಾರಣಾಂತರಗಳಿಂದ ಅದು ಬೇಡಿಕೆಯಾಗಿಯೇ ಬಾಕಿ ಉಳಿದಿದ್ದು, ಇದೀಗ ಅದನ್ನು ಕಾರ್ಯಗತಗೊಳಿಸಲು ಅಗತ್ಯ ಹೆಜ್ಜೆ ಇಡುವುದಾಗಿ ಸ್ಪಷ್ಟಪಡಿಸಿದರು.
ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಂದ ಸಂಗ್ರಹವಾಗುವ ಕಾಣಿಕೆ ಹಣವನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯವಾಗಿ ಸುಸಜ್ಜಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಪುಲ ಅವಕಾಶಗಳಿವೆ. ಈ ದಿಸೆಯಲ್ಲಿ ದೇಗುಲದ ಆಡಳಿತ ಮಂಡಳಿ ಸೂಕ್ತ ನೀಲನಕ್ಷೆ ಸಿದ್ಧಪಡಿಸಿ ಕಾರ್ಯಪ್ರವೃತ್ತವಾಗಬೇಕು ಎಂದು ಅವರು ಕಿವಿಮಾತು ಹೇಳಿದರು.
ಈ ಭೇಟಿಯ ವೇಳೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಜೆಡಿಎಸ್ ಪ್ರಮುಖರಾದ ಎಂ.ಬಿ. ಸದಾಶಿವ, ಜಾಕೆ ಮಾಧವ ಗೌಡ, ದಯಾಕರ ಆಳ್ವ, ಮೀರಾ ಸಾಹೇಬ್, ಸೋಮಸುಂದರ ಕೂಜುಗೋಡು, ಸುಕುಮಾರ್ ಕೋಡ್ತಗುಳಿ, ರಾಕೇಶ್ ಕುಂಟಿಕಾನ, ಡಾ. ತಿಲಕ್ ಎ.ಎ., ಉದಯಕುಮಾರ್ ಡಿ.ಎಸ್., ಶಿವರಾಮ ಚಿತ್ತಡ್ಕ, ಸತ್ಯನಾರಾಯಣ ಚಿಮ್ಮಿಕಲ್ಲು, ಜಯಂತ ಪಂಬೆತ್ತಾಡಿ, ನಿಹಾಲ್ ಕೋಡುಗಳಿ, ಬಿಜೆಪಿ ಮುಖಂಡರಾದ ವೆಂಕಟ್ ದಂಬೆಕೋಡಿ, ಸಂತೋಷ್ ಜಾಕೆ, ಗಿರಿಧರ ಸ್ಕಂದ, ದಿನೇಶ್ ಬಿ.ಎನ್., ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಲೋಲಾಕ್ಷ ಕೈಕಂಬ ಹಾಗೂ ಕಡಬ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









