ಉಜಿರೆ : ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಬದುಕಿಗೆ ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೂ ಸಾಹಿತ್ಯದ ಓದನ್ನು ಮಾತ್ರ ಎಂದಿಗೂ ಕೈಬಿಡಬಾರದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಬಿ.ಪಿ. ಸಂಪತ್ ಕುಮಾರ್ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಡಾ. ಟಿ. ಎನ್. ತುಳಪುಳೆ ದತ್ತಿ ಉಪನ್ಯಾಸ ಮತ್ತು ಸನ್ಮಾನ’ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಟಿ.ಎನ್. ತುಳಪುಳೆ ಅವರ ಸ್ಮರಣಾರ್ಥ ನಡೆಯುತ್ತಿರುವ ಈ ದತ್ತಿ ಉಪನ್ಯಾಸವು ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯದ ಸೊಬಗನ್ನು ಪರಿಚಯಿಸಲು ಉತ್ತಮ ವೇದಿಕೆಯಾಗಿದೆ. ಸಾಹಿತ್ಯವು ಮನುಷ್ಯನ ಅಂತರಂಗದ ಶ್ರೀಮಂತಿಕೆಯಾಗಿದ್ದು, ಮನಸ್ಸಿನ ನೆಮ್ಮದಿಗಾಗಿ ಹಾಗೂ ಕನ್ನಡದ ಕವಿಗಳ ಸಂವೇದನೆಯನ್ನು ಅರ್ಥಮಾಡಿಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಪುಸ್ತಕ ಓದುವ ಹವ್ಯಾಸದ ಜೊತೆಗೆ ಕನಿಷ್ಠ ಒಂದಾದರೂ ಕನ್ನಡ ದಿನಪತ್ರಿಕೆಯನ್ನು ನಿತ್ಯ ಓದಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಕಾಲೇಜಿನ ವತಿಯಿಂದ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭವನ್ನು ಉದ್ಘಾಟಿಸಿದ ಅಳದಂಗಡಿಯ ಖ್ಯಾತ ವೈದ್ಯ ಡಾ. ಎನ್.ಎಂ. ತುಳಪುಳೆ ಅವರು ಮಾತನಾಡಿ, ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಕನ್ನಡ ಸಾಹಿತ್ಯದ ಸೊಗಡು ಸಮಾಜದ ಎಲ್ಲೆಡೆ ಪಸರಿಸುವಂತಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅವರು, ಡಾ. ಟಿ.ಎನ್. ತುಳಪುಳೆ ಅವರಂತಹ ಸಾಹಿತ್ಯ ಪರಿಚಾರಕರ ಭಾಷಾ ಪ್ರೇಮವನ್ನು ಸ್ಮರಿಸಿದರು. ಸಾಹಿತ್ಯದ ಕಂಪನ್ನು ಪಸರಿಸಲು ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದ ಅವರು, ಜಿಲ್ಲಾ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ಹಂಚಿಕೊಂಡರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕನ್ನಡ ಭಾಷಾ ಉಪನ್ಯಾಸಕರಾದ ಸುಭಾಷ್ ರಾವ್ ಬೋಳೂರು ಹಾಗೂ ವಿಶ್ವನಾಥ ಎಸ್. ಅವರು ಅತಿಥಿ ಅಭ್ಯಾಗತರನ್ನು ಗೌರವಿಸಿದರು.
ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಆಶಯ ನುಡಿಗಳನ್ನಾಡಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ವಂದಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









