ಮಂಗಳೂರು: ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು; ಅಮೂಲ್ಯವಾದ ಜೀವಗಳನ್ನು ಉಳಿಸುವಲ್ಲಿ ರಕ್ತದಾನ ಅತ್ಯಂತ ಮಹತ್ವದ ಸೇವೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ತಿಳಿಸಿದರು.
ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಪ್ರಾದೇಶಿಕ ರಕ್ತಪೂರಣ ಕೇಂದ್ರ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ವೆನ್ಲಾಕ್, ಲೇಡಿಗೋಷನ್ ಹಾಗೂ ಕೆಎಂಸಿ ಹಳೆ ವಿದ್ಯಾರ್ಥಿಗಳ ಸಂಘದ ಜಂಟಿ ಆಶ್ರಯದಲ್ಲಿ ವೆನ್ಲಾಕ್ ರಕ್ತಪೂರಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಅಮೂಲ್ಯ ಪ್ರಾಣವನ್ನು ಕಾಪಾಡಲು ಸಾಧ್ಯವಿದೆ. ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತ ಹಾಗೂ ಅರ್ಹ ವ್ಯಕ್ತಿಯು ಯಾವುದೇ ತಪ್ಪು ಕಲ್ಪನೆಗಳಿಗೆ ಕಿವಿಗೊಡದೆ, ವೈದ್ಯಕೀಯ ಮಾರ್ಗಸೂಚಿಗಳನ್ನು ಅನುಸರಿಸಿ ಸ್ವಯಂಪ್ರೇರಣೆಯಿಂದ ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನದ ಮಹತ್ವವನ್ನು ಎಲ್ಲರೂ ಅರಿತು, ತುರ್ತು ಅಗತ್ಯವಿರುವ ರೋಗಿಗಳಿಗೆ ನೆರವಾಗಬೇಕು ಎಂದು ಅವರು ಕರೆ ನೀಡಿದರು.
‘ಡೊನೇಟ್ ಬ್ಲಡ್, ನಾಟ್ ಆನ್ ರೋಡ್’ ಎಂಬ ಜಾಗೃತಿ ಸಂದೇಶದೊಂದಿಗೆ ಮಾತನಾಡಿದ ಅವರು, ರಸ್ತೆಗಳಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಅಪಘಾತಕ್ಕೀಡಾಗಿ ರಕ್ತ ಹರಿಸುವ ಬದಲಿಗೆ, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರಿಗೆ ಪುನರ್ಜನ್ಮ ನೀಡುವ ಪುಣ್ಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಆರ್ಎಂಒ ಡಾ. ಜಗದೀಶ್ ಕೆ., ಡಾ. ಮಧುಸೂದನ್ ಹಾಗೂ ಡಾ. ಅಶ್ವತ್ ಸೇರಿದಂತೆ ಹಲವು ವೈದ್ಯರು ಮತ್ತು ಗಣ್ಯರು ಉಪಸ್ಥಿತರಿದ್ದರು. ಡಾ. ಅಣ್ಣಯ್ಯ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ನಿರಂತರವಾಗಿ ಸ್ವಯಂಪ್ರೇರಿತ ರಕ್ತದಾನ ಮಾಡುತ್ತಾ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಕ್ತದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಗಳಲ್ಲಿ ಒಟ್ಟು 1,300 ಯೂನಿಟ್ ರಕ್ತ ಸಂಗ್ರಹಣೆಯಾಗಿದೆ.
ಜಿಲ್ಲೆಯ ಒಟ್ಟು 13 ವಿವಿಧ ಕೇಂದ್ರಗಳಲ್ಲಿ ರಕ್ತದಾನ ಶಿಬಿರಗಳನ್ನು ನಡೆಸಲಾಗಿದ್ದು, ಈ ಪೈಕಿ ಎ.ಜೆ. ಆಸ್ಪತ್ರೆಯಲ್ಲಿ ಅತಿ ಹೆಚ್ಚು ಅಂದರೆ 253 ಯೂನಿಟ್ ರಕ್ತ ಸಂಗ್ರಹವಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









