ಮಂಗಳೂರು: ಸೌಜನ್ಯ ಪ್ರಕರಣವು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ಯಾವುದೇ ಮುಂದಿನ ಹೆಜ್ಜೆ ಇಡುವುದಿದ್ದರೂ ವೈಜ್ಞಾನಿಕ ದಾಖಲೆಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆಯೇ ಕ್ರಮ ಕೈಗೊಳ್ಳಬೇಕಾಗುತ್ತದೆ. ಯಾರಿಗೂ ಅನ್ಯಾಯವಾಗಬಾರದು ಎಂಬುದೇ ಸರ್ಕಾರದ ಸ್ಪಷ್ಟ ಉದ್ದೇಶವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆ ಸಂಭವಿಸಿ ಈಗಾಗಲೇ ಸುಮಾರು 14 ವರ್ಷಗಳು ಕಳೆದಿವೆ. ಪ್ರಕರಣದ ನೈಜ ಸತ್ಯವನ್ನು ಹೊರತರಲು ವೈಜ್ಞಾನಿಕ ಪುರಾವೆಗಳು ಅತ್ಯಂತ ಅಗತ್ಯವಾಗಿದ್ದು, ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವುದಾಗಿ ನಾವು ಈ ಹಿಂದೆಯೇ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದೆವು. ಆ ಭರವಸೆಯಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರದ್ದುಗೊಳಿಸುವ ಕುರಿತು ಪ್ರಣಾಳಿಕೆಯಲ್ಲಿ ನೀಡಿದ್ದ ಮಾತಿನಂತೆ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಜಾರಿಗೊಳಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ಚಂದ್ರಶೇಖರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









