- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಲೋಕಸಮರ: ಬಿಹಾರ, ಉ.ಪ್ರದೇಶದಲ್ಲಿ ಬಿಜೆಪಿಗೆ ಶೇ.50ರಷ್ಟು ಸ್ಥಾನ

Narendra-Modi [1]ನವದೆಹಲಿ: ದೇಶಾದ್ಯಂತ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ ಚುನಾವಣಾ ಸಮೀಕ್ಷೆ ಹೇಳಿದೆ.

ಎಲ್ಲೆಡೆ ಯುಪಿಎ ವಿರೋಧಿ ಮತ್ತು ಮೋದಿ ಪರ ಅಲೆ ಇರುವುದರಿಂದ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಒಟ್ಟು 61 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40 ಕಡೆ ಗೆಲವು ಸಾಧಿಸಲಿದೆ ಮತ್ತು ಬಿಹಾರದಲ್ಲಿ 40 ಸ್ಥಾನಗಳ ಪೈಕಿ 21 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂಬುದು ಸಮೀಕ್ಷೆಯಿಂದ ತಿಳಿದು ಬಂದಿದೆ.

ದಿನದಿಂದ ದಿನಕ್ಕೆ ಮೋದಿ ಜನಪ್ರಿಯತೆ ಹೆಚ್ಚುತ್ತಿದೆ. ಇದೇ ಸುದ್ದಿ ವಾಹಿನಿ ಕಳೆದ ಜನವರಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಉತ್ತರ ಪ್ರದೇಶದಲ್ಲಿ 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿತ್ತು. ಈಗ ಅದು 40ಕ್ಕೆ ಹೆಚ್ಚಿಸಿಕೊಂಡಿದೆ.

ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲಿದ್ದು, ಉತ್ತರ ಪ್ರದೇಶದಲ್ಲಿ ಕೇವಲು 11 ಸ್ಥಾನಗಳು ಮಾತ್ರ ‘ಕೈ’ಗೆ ಸಿಗಲಿವೆ ಎಂದು ಸಮೀಕ್ಷೆ ಹೇಳಿದೆ. ಸದ್ಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 21 ಸ್ಥಾನಗಳನ್ನು ಹೊಂದಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ 10 ಸೀಟುಗಳನ್ನು ಕಳೆದುಕೊಳ್ಳಲಿದೆ.

ಮುಜಾಫರ್‌ನಗರ ಗಲಭೆ, ಸಫಾಯಿ ಮಹೋತ್ಸವ ಹಾಗೂ ಶಾಸಕರ ಅಧ್ಯಯನ ಪ್ರವಾಸದ ಅವಾಂತರದಿಂದಾಗಿ ಆಡಳಿತಾರೂಢ ಸಮಾಜವಾದಿ ಪಕ್ಷ 14 ಸ್ಥಾನದಲ್ಲಿ ಹಾಗೂ ಮಾಯಾವತಿ ನೇತೃತ್ವದ ಬಿಎಸ್‌ಪಿ 13 ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ.

2009ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ನಿತಿಶ್ ಕುಮಾರ್ ನೃತ್ವದ ಜೆಡಿಯು, ಈ ಬಾರಿ ಕೇವಲ 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್‌ಜೆಡಿ 5 ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.