ಬೆಂಗಳೂರು: ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಮಾಪ್ತ ಧನಂಜಯ್ ಕುಮಾರ್ ಅವರು, ಈಗ ಜೆಡಿಎಸ್ ಕದ ತಟ್ಟಿದ್ದು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುವ ಯತ್ನ ನಡೆಸಿದ್ದಾರೆ.
ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಧನಂಜಯ್ ಕುಮಾರ್ ಅವರು, ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಅವರು ಬಿಜೆಪಿಗೆ ಮರುಸೇರ್ಪಡೆಯಾದ ನಂತರ ಅವರ ಬೆಂಬಲಿಗರಾದ ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ, ಧನಂಜಯ್ ಕುಮಾರ್ ಹಾಗೂ ಲೇಹರ್ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಬೇಸತ್ತ ಬಿಎಸ್‌ವೈ ಬೆಂಬಲಿಗರು ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಯಡಿಯೂರಪ್ಪ ವಿರುದ್ಧವೇ ಬಂಡಾಯವೆದ್ದಿದ್ದಾರೆ.
ಇತ್ತೀಚಿಗಷ್ಟೆ ಲಕ್ಷ್ಮೀನಾರಾಯಣ ಅವರು ಯಡಿಯೂರಪ್ಪ ಅವರನ್ನು ಬಹಿರಂಗವಾಗಿಯೇ ಪ್ರಶ್ನಿಸಿದ್ದರು. ಇದೀಗ ಅವರ ಮತ್ತೊಬ್ಬ ಆಪ್ತ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ.
Click this button or press Ctrl+G to toggle between Kannada and English