ಬೆಂಗಳೂರು: ತೆಲುಗು ಸೂಪರ್ ಸ್ಟಾರ್ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಈಗ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಪ್ರತಿನಿಧಿಸುತ್ತಿರುವ ಆಂಧ್ರಪ್ರದೇಶದ ಗಡಿ ಜಿಲ್ಲೆ ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹೀಗಾಗಿ ಮೊಯಿಲಿ ಅವರು ಸುಲಭವಾಗಿ ಜಯ ಗಳಿಸಿ, ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಆದರೆ ಈ ಬಾರಿ ಈ ಎರಡೂ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿವೆ. ಜೆಡಿಎಸ್‌ನಿಂದ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ವೀರಪ್ಪ ಮೊಯಿಲಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಲಿಜ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಚಿರಂಜೀವಿ ಅವರು ಸಹ ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಜೊತೆಗೆ ಆಂಧ್ರಪ್ರದೇಶದಲ್ಲಿ ಉಂಟಾಗಿರುವ ರಾಜಿಕೀಯ ಗೊಂದಲಗಳಿಂದಾಗಿ ಚಿಕ್ಕಬಳ್ಳಾಪುರ ಸುರಕ್ಷಿತ ಕ್ಷೇತ್ರ ಎಂದು ಚಿರಂಜೀವಿ ಸಹ ಭಾವಿಸಿದ್ದಾರೆ ಎನ್ನಲಾಗಿದೆ.
ಈ ಎಲ್ಲಾ ಊಹಾಪೋಹಗಳಿಗೆ ಪುಷ್ಠಿನಿಡುವಂತೆ ಕಾಂಗ್ರೆಸ್ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ವೀರಪ್ಪ ಮೊಯಿಲಿ ಅವರನ್ನು ಹೊರತುಪಡಿಸಿ, ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಪ್ರಭಾವಿ ಕಾಂಗ್ರೆಸ್ ಮುಖಂಡ ಮೊಯಿಲಿ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡದಿರುವುದು ಹಾಗೂ ಸ್ಥಳೀಯ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಚಿರಂಜೀವಿ ಸ್ಪರ್ಧೆ ಸುದ್ದಿಗೆ ಮತ್ತಷ್ಟು ಮಹತ್ವ ಬಂದಿದೆ.
Click this button or press Ctrl+G to toggle between Kannada and English