- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗೀತಾ ಸ್ಪರ್ಧೆಗೆ ಶಿವರಾಜ್ ಕುಮಾರ್ ಬೆಂಬಲ

Geetha-Shivarajkumar [1]ಬೆಂಗಳೂರು: ಪತ್ನಿ ಗೀತಾ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನನ್ನ ಬೆಂಬಲ ಇದೆ ಎಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಇದರೊಂದಿಗೆ ಡಾ.ರಾಜ್ ಕುಟುಂಬದ ಸದಸ್ಯರೊಬ್ಬರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ.

ಗೀತಾ ಸ್ಪರ್ಧೆಗೆ ನಮ್ಮ ಕುಟುಂಬ ವಿರೋಧವಿಲ್ಲ. ಅವರಿಗೆ ನನ್ನ ಹಾಗೂ ಕುಟುಂಬದ ಸಂಪೂರ್ಣ ಬೆಂಬಲ ಇದ್ದು, ಅಗತ್ಯ ಬಿದ್ದರೆ ತಾವು ತಮ್ಮ ಪತ್ನಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.

ಗೀತಾ ಅವರ ಸ್ಪರ್ಧೆ ಕುರಿತು ಮಾರ್ಚ್ 17ರಂದು ಸುದ್ದಿಗೋಷ್ಠಿ ಕರೆದು ಎಲ್ಲವನ್ನು ಸ್ಪಷ್ಟಪಡಿಸುವುದಾಗಿ ಶಿವರಾಜ್ ಕುಮಾರ್ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್‌ನಿಂದ ಸ್ಪರ್ಧಿಸುತ್ತಿದ್ದು,  ಅವರ ವಿರುದ್ಧ  ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಸ್ಪರ್ಧಿಸುತ್ತಿದ್ದಾರೆ.

2008ರ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರ ವಿರುದ್ಧ ಸ್ಪರ್ಧಿಸಿದ್ದ ಬಂಗಾರಪ್ಪ ಅವರು ಪರಾಭವಗೊಂಡಿದ್ದರು. ನಂತರ 2009ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಸ್ಪರ್ಧಿಸಿದ್ದ ಬಂಗಾರಪ್ಪ ಮತ್ತೆ ಸೋಲು ಅನುಭವಿಸಿದ್ದರು. ತಮ್ಮ ತಂದೆಯ ಈ ಎರಡೂ ಸೋಲಿನ ಸೇಡು ತಿರಿಸಿಕೊಳ್ಳಬೇಕಾದ ಹೊಣೆ ಈಗ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರ ಮೇಲಿದೆ. ಹೀಗಾಗಿ ಈ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಚುನಾವಣೆ ನಡೆಯುವುದು ಖಚಿತವಾಗಿದೆ.

ಇದೇ ಮೊದಲ ಬಾರಿಗೆ ಡಾ.ರಾಜಕುಮಾರ್ ಅವರ ಕುಟುಂಬದ ಸದಸ್ಯರೊಬ್ಬರು ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಸಹಜವಾಗಿಯೇ ಚುನಾವಣಾ ಕಣ ರಂಗೇರಲಿದೆ. ಇನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಕಾಂಗ್ರೆಸ್, ವಿಧಾಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಆದರೆ ಇದಕ್ಕೆ ಕಾಗೋಡು ತಿಮ್ಮಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ.

ಬಂಗಾರಪ್ಪ ಅವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಅವರೂ ಸಹ ಕಾಂಗ್ರೆಸ್ ಟಿಕೆಟ್‌ಗಾಗಿ ತೀವ್ರ ಪ್ರಯತ್ನ ನಡೆಸಿದ್ದಾರೆ. ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಿದರೆ, ಅದರಿಂದ ಯಡಿಯೂರಪ್ಪ ಅವರಿಗೆ ಅನುಕೂಲವಾಗಬಹುದು ಎಂಬ ಆತಂಕವೂ ರಾಜ್ಯ ಕಾಂಗ್ರೆಸ್ ಮುಖಂಡರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಒಂದು ವೇಳೆ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧೆಗೆ ನಿರಾಕರಿಸಿದರೆ, ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಬಂಡಾರಿ ಅವರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.