ಮತದಾನದ ಅವಧಿ ಒಂದು ಗಂಟೆ ವಿಸ್ತರಣೆ

4:08 PM, Tuesday, March 18th, 2014
Share
1 Star2 Stars3 Stars4 Stars5 Stars
(5 rating, 5 votes)
Loading...
Anil Zha

ಬೆಂಗಳೂರು : ಮತದಾನದ ಅವಧಿ ವಿಸ್ತರಣೆ ಮಾಡಲು ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದ್ದು, ರಾಜ್ಯದ 28 ಲೋಕಾಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅನಿಲ್ ಕುಮಾರ್ ಝಾ, ಬೇಸಿಗೆ ಹಿನ್ನಲೆಯಲ್ಲಿ ಮತದಾನದ ಅವಧಿಯನ್ನು ಹೆಚ್ಚಿಸಲು ಮನವಿಗಳು ಬಂದಿದ್ದವು. ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಒಪ್ಪಿಗೆ ನೀಡಿದ್ದು, ಏ.17 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.

ನಕ್ಸಲ್ ಪೀಡಿತ ಪ್ರದೇಶ ಸೇರಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ ಎಂದರು. ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಬದಲಾವಣೆ ಮಾಡುವಂತೆ ಮನವಿಗಳು ಬಂದಿವೆ. ಆದರೆ ಕೇಂದ್ರ ಚುನಾವಣಾ ಆಯೋಗ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ ಎಂದು ತಿಳಿಸಿದರು.

19ರಂದು ಅಧಿಸೂಚನೆ : ಬುಧವಾರ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಆರಂಭಿಸುವುದಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸುತ್ತಾರೆ. ಮಾ.26ರವರೆಗೆ ಈ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಕೆಯಾಗುವ ತನಕ ಚುನಾವಣಾ ಆಯೋಗದ ದೃಷ್ಟಿಯಲ್ಲಿ ಯಾರೊಬ್ಬರೂ ಅಭ್ಯರ್ಥಿಯಾಗಿರುವುದಿಲ್ಲ ಎಂದರು.

ಪರಿಹಾರ ಕೊಡಲು ಅಡ್ಡಿಯಿಲ್ಲ : ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿ ಬೆಳೆನಾಶವಾಗಿದೆ, ಮನೆಗಳು ಕುಸಿದಿವೆ. ಇದಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡುವುದಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ, ಪರಿಹಾರ ವಿತರಣೆ ಸಂದರ್ಭದಲ್ಲಿ ಸರ್ಕಾರಿ ಆಡಳಿತ ಯಂತ್ರದ ದುರ್ಬಳಕೆಯಾಗಬಾರದು ಎಂದು ಅನಿಲ್ ಕುಮಾರ್ ಝಾ ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English