ಬೆಂಗಳೂರು: ರೈತ ವಿಠಲ್ ಅರಬಾವಿ ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ, ಇದನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ.
ರೈತ ವಿಠಲ್ ಅರಬಾವಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ. ಸದ್ಯ ವಿಠಲ್ ಅರಬಾವಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ಸಮಿತಿಯೊಂದನ್ನು ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ವಿಠಲ್ ಅರಬಾವಿ ವಿರುದ್ಧ ಸಿದ್ದರಾಮಯ್ಯ ಅವರ ಹೇಳಿಕೆ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಈ ಹೇಳಿಕೆಗೆ ಪ್ರತಿಪಕ್ಷಗಳು ಹಾಗೂ ರೈತ ಸಂಘಟನಗಳೂ ತೀವ್ರ ಆಕ್ಷೇಪ ವ್ಯಕ್ತೃಪಡಿಸಿದ್ದು, ಈ ಕೂಡಲೇ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿವೆ.
ಬುಧವಾರ ರಾತ್ರಿ ಮಡಿಕೇರಿಯ ನಾಪೋಕ್ಲುವಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಅಧಿವೇಶನದ ವೇಳೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಆ ರೈತ ಚೆನ್ನಾಗಿ ಕುಡಿದಿದ್ದರು ಎಂದು ಹೇಳಿದ್ದರು.
ಸಿದ್ದರಾಮಯ್ಯ ಹೇಳಿಕೆಗೆ ಗಣ್ಯರು ಗರಂ
ಸರ್ಕಾರ ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಲು ವಿಳಂಬ ಮಾಡಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಖ್ಮಮಂತ್ರಿಗಳು ತಮ್ಮ ಸ್ಥಾನದ ಜವಾಬ್ದಾರಿ ಅರಿತು ಮಾತನಾಡಬೇಕು. ಅಲ್ಲದೆ ಸಿಎಂ ಈ ಕೂಡಲೇ ರೈತರ ಕ್ಷಮೆಯಾಚಿಸಬೇಕು.
-ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಸಿಎಂ ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಎರಡು ದಿನಗಳಿಂದ ರೈತರು ಧರಣಿ ಕುಳಿತಿದ್ದರೂ ಸರ್ಕಾರ ಇದಕ್ಕೆ ಸ್ಪಂದಿಸಲಿಲ್ಲ. ಅದ್ದರಿಂದ ರೈತ ಅನಿವಾರ್ಯವಾಗಿ ತನ್ನ ಪ್ರಾಣತ್ಯಾಗ ಮಾಡಬೇಕಾದ ಪರಿಸ್ಥಿತಿ ಬಂತ್ತು. ಇದಕ್ಕೆ ಸರ್ಕಾರವೇ ನೇರ ಹೊಣೆ.
-ಡಿ.ವಿ ಸದಾನಂದಗೌಡ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ
ರೈತ ಆತ್ಮಹತ್ಯೆ ಮಾಡಿಕೊಳ್ಳುವಾಗ ಸರ್ಕಾರ ಏನು ಮಾಡುತ್ತಿತ್ತು. ಕಳೆದ 5-6 ತಿಂಗಳಿನಿಂದ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ.
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ
ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಬಾರದು. ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ರೈತ ಆತ್ಮಹತ್ಯೆ ಮಾಡಿಕೊಂಡರೆ ಇದಕ್ಕೂ ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಬಾರದು.
– ಕೆ.ಎಸ್. ಪುಟ್ಟಣ್ಣಯ್ಯ, ಶಾಸಕ ಮತ್ತು ರೈತ ಮುಖಂಡ
Click this button or press Ctrl+G to toggle between Kannada and English