ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಟೀಲು ದೇವಿಗೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಶೀಘ್ರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಆತ ಪ್ರಕರಣದ ಪ್ರಮುಖ ಆರೋಪಿಗಳ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಆದುದರಿಂದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸುವಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಈ ಬಗ್ಗೆ ನಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ| ಜಿ. ಪರಮೇಶ್ವರ್ ಹಾಗೂ ಐಜಿಪಿ ಓಂಪ್ರಕಾಶ್ ಜತೆ ಮಾತುಕತೆ ನಡೆಸಿದ್ದೇನೆ ಎಂದರು.
ಆರೋಪಿಗಳು ವಿದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಅವರ ಪತ್ತೆ ಹಾಗೂ ಬಂಧನಕ್ಕೆ ಕೇಂದ್ರ ಸರಕಾರದ ನೆರವು ಬೇಕಾಗಿದೆ. ಕೇಂದ್ರದ ಸಹಾಯ ಪಡೆಯಬೇಕಾದರೆ ರಾಜ್ಯ ಸರಕಾರ ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕಾಗುತ್ತದೆ ಎಂದು ಮಾಧ್ಯಮಗಳ ವರದಿಗಳು ಉಲ್ಲೇಖೀಸಿವೆ. ಈ ಬಗ್ಗೆ ರಾಜ್ಯ ಸರಕಾರದ ಕಡೆಯಿಂದ ಯಾವುದೆಲ್ಲ ಕ್ರಮ ಗಳು ಆವಶ್ಯವಿವೆಯೋ ಅದನ್ನು ಮಾಡಲು ಈಗಾಗಲೇ ನಾನು ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಮನವಿ ಮಾಡಿದ್ದು, ಪೂರಕ ಕ್ರಮದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ದ.ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೆ. 12ರಂದು ಬಕ್ರೀದ್ ಹಬ್ಬ ಆಚರಿಸಲಾಗುತ್ತಿದ್ದು, ಅಂದು ಇಲ್ಲಿನ ಎಲ್ಲ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ. ಇದಕ್ಕೆ ಪೂರಕ ಸ್ಪಂದನೆ ದೊರಕಿದೆ ಎಂದು ಅವರು ತಿಳಿಸಿದರು.
Click this button or press Ctrl+G to toggle between Kannada and English