- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಂಗಳೂರಲ್ಲಿ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿ

u-t-khadar [1]ಮಂಗಳೂರು: ವಸತಿ ವ್ಯವಸ್ಥೆಯಿಲ್ಲದ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿಯಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆಹಾರ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಯಾವುದಾದರೊಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದನ್ನು ಜಾರಿಗೊಳಿಸಲು ಪ್ರಸ್ತಾವನೆ ಸಲ್ಲಿಸುವಂತೆ ಆದೇಶಿಸಿದ್ದಾರೆ. ಅದರಂತೆ ಬೆಂಗಳೂರು ಮಹಾನಗರವನ್ನು ಆಯ್ಕೆ ಮಾಡಲಾಗುವುದು ಎಂದರು.

ಆಹಾರ ಇಲಾಖೆ ಮತ್ತು ಸ್ಥಳೀಯಾಡಳಿತದ ಜಂಟಿ ಆಶ್ರಯದಲ್ಲಿ ನಿರ್ಗತಿಕರಿಗೆ ಊಟ ಯೋಜನೆ ಕಾರ್ಯಗತಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲೂ ಆರಂಭಿಸಲು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ, ಗೋಧಿ ಮಾತ್ರವಲ್ಲದೆ ಪ್ರೋಟೀನ್‍ಯುಕ್ತ ದ್ವಿದಳ ಧಾನ್ಯಗಳನ್ನು ಪ್ರತಿ ಕುಟುಂಬಕ್ಕೆ ಒಂದು ಕೆ.ಜಿ.ಯಂತೆ ನೀಡಲಾಗುವುದು. ಅಲ್ಲದೆ, ತಾಳೆ ಎಣ್ಣೆ, ತೆಂಗಿನೆಣ್ಣೆ, ಸೂರ್ಯಕಾಂತಿ ಎಣ್ಣೆಯಲ್ಲಿ ಯಾವುದಾದರೊಂದು ಬಗೆಯ ಎಣ್ಣೆಯನ್ನು ವಿತರಿಸಲಾಗುವುದು. ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದರು.