ಮಂಗಳೂರು: ದ. ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ದ.ಕ. ಸಂಸದ ನಳಿನ್‌ಕುಮಾರ್ ಕಟೀಲು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದಕ್ಕೆ ಪುರಾವೆ ಎಂಬಂತೆ ರಾಜ್ಯದಲ್ಲಿ ಐದಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಮನೆಗಳ ಮೇಲೆ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಯಲಯದ ದಾಳಿ ನಡೆದಿದೆ. ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟತೆಯ ಕೂಪದಲ್ಲಿ ಬಿದ್ದಿದೆ ಎಂದು ದೂರಿದರು.
ಚಿಕ್ಕರಾಯಪ್ಪ ಮತ್ತು ಜಯಚಂದ್ರ ಅವರು ಬಂಧಿತರಾಗಿ ಈಗ ಜಾಮೀನು ಪಡೆದಿದ್ದು ಅವರನ್ನು ಕೂಡಾ ಸಂಕಷ್ಟದಿಂದ ಪಾರು ಮಾಡಲು ಸರ್ಕಾರ ಯತ್ನಿಸುತ್ತಿದೆ ಎಂದರು.
ಸಚಿವ ಜಾರಕಿಹೊಳಿಯವರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು, ಮೇಲ್ನೋಟಕ್ಕೆ ಹಣಕಾಸು ಅಕ್ರಮಗಳನ್ನು ಎಸಗಿರುವುದು ಸಾಬೀತಾಗಿರುವುದರಿಂದ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನೋಟಿಸ್ ಜಾರಿ ಮಾಡಿ ಅವರನ್ನು ಶಾಸಕಾಂಗ ಪಕ್ಷದಿಂದ ಅಮಾನತುಗೊಳಿಸಬೇಕು. ಎಲ್ಲಾ ಪ್ರಕರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಿ ಪ್ರಕರಣಗಳಿಗೆ ತಾತ್ವಿಕ ಅಂತ್ಯ ಕಾಣಿಸಬೇಕೆಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಎನ್. ಯೋಗೀಶ್ ಭಟ್ , ಅನ್ವರ್ ಮಾಣಿಪ್ಪಾಡಿ, ಮೋನಪ್ಪ ಭಂಡಾರಿ, ಉಪ ಮೇಯರ್ ಸುಮಿತ್ರ ಕರಿಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಜಯರಾಮ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English