ಮಂಗಳೂರು : ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ಜು.7ರಂದು ಅಪರಾಹ್ನ 3 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವರು ಎಂದವರು ಹೇಳಿದ್ದಾರೆ.
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ಎಸ್.ಆರ್‌ಪಾಟೀಲ್, ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ. ಮುಂದಿನ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ಧಗೊಳಿಸುವ ಉದ್ದೇಶದಿಂದ ಪ್ರತೀ ಕ್ಷೇತ್ರಗಳಲ್ಲಿ ಈಗಾಗಲೇ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಸರಕಾರದ ಅಭಿವೃದ್ಧಿ ಪರ ಕಾರ್ಯಗಳನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ ಎಂದವರು ತಿಳಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ಧನ ಪೂಜಾರಿ ಅವರ ಬಗ್ಗೆ ಕೀಳು ಭಾಷೆಯಲ್ಲಿ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ರೈ ಹೇಳಿದ್ದಾರೆ.
‘ಸಾಕ್ಷ್ಯಾಧಾರಗಳಿಲ್ಲದ ಆರೋಪಕ್ಕೆ ಉತ್ತರಿಸುವುದಿಲ್ಲ’ ಎಂದವರು ಸ್ಪಷ್ಟನೆ ನೀಡಿದ್ದಾರೆ. ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರನ್ನು ರಸ್ತೆಗಿಡುವ ಪ್ರಕರಣದಲ್ಲಿ ಉಂಟಾದ ಗೊಂದಲವನ್ನು ಸೌಹಾರ್ದಯುತವಾಗಿ ಬಗೆಹರಿಸಲು ತಾತ್ಕಾಲಿಕ ತಡೆ ನೀಡಲಾಗಿದೆ ಎಂದೂ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಹರೀಶ್ ಕುಮಾರ್, ನಾಯಕರಾದ ಶಶಿಧರ ಹೆಗ್ಡೆ, ಇಬ್ರಾಹಿಂ ಕೋಡಿಜಾಲ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English