ಮಂಗಳೂರು : ದ.ಕ.ಜಿಲ್ಲಾ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಸೋಮವಾರ ನಗರದ ಕದ್ರಿ ಮಲ್ಲಿಕಟ್ಟೆಯ ಸರಕಾರಿ ಪ್ರವಾಸಿ ಮಂದಿರದ ಬಳಿ ನಡೆಯಿತು.
ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,ಜಾಗತಿಕ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಪ್ರಾಕೃತಿಕ ಅಸಮತೋಲನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಲ್ಲಿಯೂ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಈ ಬಾರಿ ನೀರಿಗಾಗಿ ಅರಣ್ಯ ಎಂಬ ಧ್ಯೇಯ ವಾಕ್ಯದೊಂದಿಗೆ ವನಮಹೋತ್ಸವ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ 6 ಕೋಟಿ ಗಿಡ ನೆಡುವ ಯೋಜನೆಗೆ ಈ ಬಾರಿ ರಾಜ್ಯದ ಮುಖ್ಯಮಂತ್ರಿಯ ಮೂಲಕ ಚಾಲನೆ ನೀಡಲಾಗಿದೆ ಎಂದರು.
ಗಿಡ ನೆಟ್ಟು, ಗಿಡ ಬೆಳೆಸಿ, ಗಿಡ ಉಳಿಸಲು ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಮಂಗಳೂರು ವಲಯ ಅರಣ್ಯಾಧಿಕಾರಿ ಶ್ರೀಧರ್ ನಾಯಕ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಟಿ.ಚಂದ್ರಶೇಖರಯ್ಯ, ಸಹಾಯಕ ಅಭಿಯಂತರ ರತ್ನಾಕರ್, ತಹಶೀಲ್ದಾರ್ ಮಹಾದೇವಯ್ಯ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ರಾಡ್ರಿಗಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್, ಪ್ರೆಸ್‍ಕ್ಲಬ್ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಮಹಮ್ಮದ್ ಅರಿಫ್, ಪುಷ್ಪರಾಜ ಶೆಟ್ಟಿ ಬಿ.ಎನ್. ಉಪಸ್ಥಿತರಿದ್ದರು. ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.
Click this button or press Ctrl+G to toggle between Kannada and English