ಪತ್ರಕರ್ತರ ಮೇಲೆ ಹಲ್ಲೆ ನಡೆದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

9:25 PM, Saturday, August 5th, 2017
Share
1 Star2 Stars3 Stars4 Stars5 Stars
(No Ratings Yet)
Loading...
DC jagadeeshaಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ  ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ  ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ  ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ. ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿ ಮಾಡಬಾರದು ಎಂದು ಅವರು ಹೇಳಿದರು. ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚಿಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ, ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ವರದಿ ಮಾಡಲು ತೆರಳುವ ಪತ್ರಕರ್ತರೇ ತಾವೇ ಅಪಾಯಕ್ಕೊಳಗಾಗಬೇಕಾದ ಸನ್ನಿವೇಶಗಳು ಎದುರಾಗುತ್ತಿವೆ. ಇಂತಹ ಸಂದರ್ಭಗಳಲ್ಲಿ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.

ಸಮಿತಿ ಸದಸ್ಯ ಮುಹಮ್ಮದ್ ಆರಿಫ್ ಪಡುಬಿದ್ರಿ ಸಭೆಯಲ್ಲಿ ಮಾತನಾಡಿ, ಕಳೆದ ಒಂದು ದಶಕಗಳಿಂದ ಜಿಲ್ಲೆಯಲ್ಲಿ ನಡೆದ ಹಲವು ಕೊಲೆ, ಗಲಭೆಗಳ ಸಂದರ್ಭದಲ್ಲಿ ವರದಿ ಮಾಡಲು ಹೋಗಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ಇಂಥಹ ಘಟನೆಗಳ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ಕೊಡಬೇಕು. ಕೆಲವೊಮ್ಮೆ ಬೆದರಿಕೆ ಕರೆಗಳೂ ಬಂದಿವೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಗಲಭೆಗಳ ಸಂದರ್ಭಗಳಲ್ಲಿ ಪತ್ರಕರ್ತರು ಒಂದೇ ವಾಹನದಲ್ಲಿ ವರದಿಗಾರಿಕೆಗೆ ತೆರಳಿದರೆ ಉತ್ತಮ. ಈ ಸಂದರ್ಭಗಳಲ್ಲಿ ಮನವಿ ಮಾಡಿದರೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಪತ್ರಕರ್ತರು ಹಲ್ಲೆ, ಬೆದರಿಕೆ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮಾತನಾಡಿ, 2016ರ ಜನವರಿ 1ರಿಂದ 2017 ಮೇ 31ರವರೆಗೆ ಜಿಲ್ಲೆಯಲ್ಲಿ ಪತ್ರಕರ್ತರ ಮೇಲೆ 3 ಹಲ್ಲೆ ಪ್ರಕರಣಗಳು ನಡೆದಿವೆ. ಈ ಪೈಕಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಹಾಗೂ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಎರಡು  ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದೆ. 1 ಪ್ರಕರಣ ತನಿಖೆಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಂಗಳೂರು ಕೇಂದ್ರ ವಿಭಾಗದ ಎಸಿಪಿ  ಉದಯ ನಾಯಕ್, ಎಸ್ಪಿ ಕಚೇರಿಯ ಎಸ್‍ಐ ಎ.ವಿ.ರೊಸಾರಿಯೊ, ಮಂಗಳೂರು ತಹಶೀಲ್ದಾರ್ ಸಿ.ಮಹಾದೇವಯ್ಯ, ಸಮಿತಿಯ ಸದಸ್ಯರಾದ ಪತ್ರಕರ್ತ ಭಾಸ್ಕರ ರೈ,  ಪತ್ರಕರ್ತರ ಸಂಘದ ಉಪಾಧ್ಯಕ್ಷ ಸುಖೇಶ್ ಶೆಟ್ಟಿ, ವಾರ್ತಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English