ಮಂಗಳೂರು : ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿರುವ ಹಿನ್ನೆಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ತಕ್ಷಣ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮಾತನಾಡಿ ಸಿಐಡಿ ತನಿಖೆ ನೆಪದಲ್ಲಿ ಗಣಪತಿ ಆತ್ಮಹತ್ಯೆ ಪ್ರಕರಣದ ಸಾಕ್ಷ್ಯನಾಶ ಮಾಡಲಾಗಿದೆ. ತನಿಖೆ ಸಮರ್ಪಕವಾಗಿ ನಡೆಸಿಲ್ಲ. ಇದೇ ಆಧಾರದಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಾಯುವ ಮುನ್ನ ಗಣಪತಿ ಸಚಿವ ಜಾರ್ಜ್ ಅವರ ಹೆಸರು ಹೇಳಿರುವ ಕಾರಣ ಅವರು ರಾಜೀನಾಮೆ ನೀಡಬೇಕು ಎಂದರು.
ಭ್ರಷ್ಟಾಚಾರ ಭಾಗ್ಯಸಿದ್ದರಾಮಯ್ಯ ಸರ್ಕಾರದಲ್ಲಿ ಕೆಲಸ ಆಗಬೇಕೆಂದಿದ್ದರೆ ಸೂಟ್‌ಕೇಸ್ ನೀಡಬೇಕು ಎನ್ನುವ ಆರೋಪ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಅವರ ಹೇಳಿಕೆಯಿಂದ ದೃಢಪಟ್ಟಿದೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ ಭಾಗ್ಯದ ಜತೆ ಹಿಂದು ಕಾರ್ಯಕರ್ತರ ಹತ್ಯಾಭಾಗ್ಯವನ್ನೂ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಟಾರ್ಗೆಟ್ ಮಾಡಿ ಕಾರ್ಯಕರ್ತರ ಹತ್ಯೆ, ಹಲ್ಲೆಗೆ ಕಾಂಗ್ರೆಸ್ ಪಕ್ಷದ ಪರೋಕ್ಷ ಸಹಕಾರವಿದೆ ಎಂದು ಅವರು ಆರೋಪಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾ. ಬ್ರಿಜೇಶ್ ಚೌಟ, ಉಮಾನಾಥ ಕೋಟ್ಯಾನ್, ಬಂಟ್ವಾಳ ಮಂಡಲ ಅಧ್ಯಕ್ಷ ದೇವದಾಸ ಶೆಟ್ಟಿ, ಮಂಗಳೂರು ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು ಉತ್ತರ ಅಧ್ಯಕ್ಷ ಡಾ. ವೈ.ಭರತ್ ಶೆಟ್ಟಿ ಮಾತನಾಡಿದರು.
ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರು, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಮೂಡುಬಿದರೆ, ಕಿಶೋರ್ ರೈ, ಮುಖಂಡರಾದ ಸತ್ಯಜಿತ್ ಸುರತ್ಕಲ್, ಜಿತೇಂದ್ರ ಕೊಟ್ಟಾರಿ, ರವೀಂದ್ರ ಶೆಟ್ಟಿ ಉಳಿದೊಟ್ಟು ಭಾಗವಹಿಸಿದ್ದರು.
Click this button or press Ctrl+G to toggle between Kannada and English