ಕೋಮು ಗಲಭೆ ಬಿಜೆಪಿಯ ಚುನಾವಣಾ ತಂತ್ರ: ವೆಂಕಟೇಶ್

12:49 PM, Thursday, February 15th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

congressಮಂಗಳೂರು: ರಾಜ್ಯ ಸರ್ಕಾರ ಮಾಡಿರುವ ಸಾಧನೆಗಳ ಮೂಲಕವೇ ಪಕ್ಷ ಜನರ ಬಳಿಗೆ ತೆರಳಲಿದ್ದು, ಕೆಲ ತಿಂಗಳುಗಳಿಂದೀಚೆಗೆ ದ.ಕ. ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ಬಿಜೆಪಿಯ ಚುನಾವಣಾ ತಂತ್ರವಾಗಿದೆ. ಆದರೆ ಅದು ಸಫಲವಾಗುವುದಿಲ್ಲ. ಅದಕ್ಕೆ ಉತ್ತರ ಮುಂದಿನ ಎರಡು ತಿಂಗಳಲ್ಲಿ ದೊರೆಯಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆ ಕಾಂಗ್ರೆಸ್‌ನ ತವರೂರು. ಇದು ಹಾಗೆಯೇ ಮುಂದುವರಿಯಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಹರಿದು ಬಂದಿದೆ. ಜನತೆ ಕಾಂಗ್ರೆಸ್ ಸರ್ಕಾರದ ಸಾಧನೆಗೆ ಮನ್ನಣೆ ನೀಡಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೆ ಸ್ಥಿರ ಸರ್ಕಾರವನ್ನು ಕಾಂಗ್ರೆಸ್ ಪಕ್ಷ ನೀಡಲಿದ್ದು, ಬಹುಸಂಖ್ಯಾತರಿರುವಲ್ಲಿ ಅಲ್ಪಸಂಖ್ಯಾತರನ್ನು ಜತೆಗೆ ಕೊಂಡೊಯ್ಯುವ ಕಾರ್ಯವನ್ನು ಪಕ್ಷ ಮುಂದುವರಿಸಲಿದೆ ಎಂದು ಹೇಳಿದರು.

ಚುನಾವಣಾ ಪ್ರಚಾರ ಕಾರ್ಯದ ಹಿನ್ನೆಲೆಯಲ್ಲಿ ಫೆ. 15ರಿಂದ 28ರವರೆಗೆ ದ.ಕ. ಜಿಲ್ಲೆಯಲ್ಲಿ ಪಂಚಾಯತ್ ವ್ಯಾಪ್ತಿಗಳಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಲಿದೆ. ದ.ಕ. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಸಿದ್ಧಗೊಳ್ಳುತ್ತಿದೆ ಎಂದರು.

ಫೆ. 17ರಂದು ದ.ಕ. ಜಿಲ್ಲೆಯಿಂದ ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ವೀಕ್ಷಕರಾದ ಪ್ರಸನ್ನ ಕುಮಾರ್, ಹುಚ್ಚಪ್ಪ ಅವರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 3 ಗಂಟೆಯವರೆಗೆ ಅಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ವ್ಯಕ್ತವಾಗುವ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಕರು ಕೆಪಿಸಿಸಿಗೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಮಾರ್ಚ್‌ ಮೊದಲ ವಾರದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಗೆ ಭೇಟಿ ನೀಡಲಿದ್ದಾರೆ. ಉಭಯ ಜಿಲ್ಲೆಗಳ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಬಸ್ ಮೂಲಕ ಪಕ್ಷದ ಹಿರಿಯ ನಾಯಕರ ಜತೆ ಸಂಚಾರ ಮಾಡಲಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿಯವರ ಭೇಟಿ ಕಾರ್ಯಕ್ರಮದ ಬಗ್ಗೆ ರೂಪು ರೇಷೆಗಳು ಸಿದ್ಧಗೊಳ್ಳುತ್ತಿವೆ. ಮೂರರಿಂದ ನಾಲ್ಕು ದಿನಗಳ ಕಾಲ ಅವರು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಂಚಾರ ಮಾಡಲಿದ್ದಾರೆ. ಸಂವಾದ, ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ದ. ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಎನ್‌ಡಿಎ ಸರ್ಕಾರದ ಆಡಳಿತಾವಧಿಯಲ್ಲಿ ಅಡಿಕೆ, ರಬ್ಬರ್, ಕಾಳುಮೆಣಸು ಮೊದಲಾದ ಕೃಷಿ ಉತ್ಪನ್ನಗಳ ಬೆಲೆ ಕುಸಿತಗೊಂಡಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಇದೇ ವೇಳೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ವಿದೇಶಿ ಆಮದು ನೀತಿಯನ್ನು ನಿರ್ವಹಿಸುವಲ್ಲಿ ಎನ್‌ಡಿಎ ವಿಫಲವಾಗಿದೆ ಎಂದು ಆರೋಪಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English