ಮಂಗಳೂರು: ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿಯೇ ವಾಸ್ತವ್ಯವಿದ್ದು ಚುನಾವಣೆ ಪ್ರಚಾರ ಮಾಡುವುದು ಮಾಮೂಲಿ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಾಂಗ್ರೆಸ್‌ನ ಅಭ್ಯರ್ಥಿಗಳು ದೂರದ ಸೌದಿಯಲ್ಲಿ ಚುನಾವಣೆ ಪ್ರಚಾರ ನಡೆಸುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ.
ಹೌದು. ದ.ಕ ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್ ರೈ, ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ. ಖಾದರ್, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಮೊಯ್ದಿನ್ ಬಾವ ಸೇರಿದಂತೆ ಇತರರು ಕಾಂಗ್ರೆಸ್ ಪಕ್ಷದ ಸೌದಿ ಅರೇಬಿಯಾ ಘಟಕದಿಂದ ಆಯೋಜಿಸಲಾದ ಚುನಾವಣಾ ಪೂರ್ವ ಸಭೆಗೆ ಸೌದಿಗೆ ತೆರಳಿದ್ದು ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಸೌದಿ ಅರೇಬಿಯಾದಲ್ಲಿ ಜುಬೈಲ್ ಕೇಮ್ಯದ ಬೀಚ್ ಕ್ಯಾಂಪ್‌ನಲ್ಲಿ ಇಂದು ಸಂಜೆ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಏ. 5ರಂದು ಯು.ಟಿ. ಖಾದರ್ ಕಾಂಗ್ರೆಸ್ ಎನ್‌ಆರ್‌ಐ ತಾಯಿಫ್ ಘಟಕದ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಿದರೆ, ಮೊಯ್ದಿನ್ ಬಾವ ಉಮ್ರಾಕ್ಕೆ ತೆರಳಿ ಸೌದಿ ಅರೇಬಿಯಾದ ಜೆದ್ದಾದಲ್ಲಿ ಶುಕ್ರವಾರ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಇನ್ನು ಶಾಸಕ ಮೊಯ್ದಿನ್ ಬಾವ ಮತ್ತು ಸಚಿವ ರಮಾನಾಥ್ ರೈ ಅವರು ಸೌದಿ ಅರೇಬಿಯಾದ ಜುಬೈಲ್ ಕೇಮ್ಯದ ಬೀಚ್ ಕ್ಯಾಂಪ್‌ನಲ್ಲಿ ನಡೆಯುವ ಕಾಂಗ್ರೆಸ್ ಸಮಾವೆಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೌದಿ ಅರೇಬಿಯಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಯುವಕರು ಉದ್ಯೋಗಕ್ಕಾಗಿ ತೆರಳಿದ್ದು ಅವರು ಚುನಾವಣೆ ಸಂದರ್ಭದಲ್ಲಿ ಜಿಲ್ಲೆಗೆ ಬಂದು ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಈ ಪ್ರಚಾರ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
Click this button or press Ctrl+G to toggle between Kannada and English