ಮಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಪ್ರಿಯಾಂಕಾ ವಾದ್ರಾ ಸಿದ್ಧವಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರಲು ಸಾಧ್ಯವಾಗದ ಕಾರಣ ಅವರ ಅನುಪಸ್ಥಿತಿಯನ್ನು ಪ್ರಿಯಾಂಕಾ ವಾದ್ರಾ ತುಂಬಲಿದ್ದಾರೆ.
ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಪ್ರಿಯಾಂಕಾ ವಾದ್ರಾ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕಾ ಖರ್ಗೆ ತಮ್ಮ ಸ್ವಕ್ಷೇತ್ರದಲ್ಲಿ ಭಾರೀ ಸ್ಪರ್ಧೆ ಎದುರಿಸುತ್ತಿದ್ದಾರೆ . ಈ ಹಿನ್ನೆಲೆಯಲ್ಲಿ ಪ್ರಿಯಾಂಕ ವಾದ್ರಾ ಅವರನ್ನು ಸ್ಟಾರ್ ಕ್ಯಾಂಪೇನರ್ ಆಗಿ ರಾಜ್ಯಕ್ಕೆ ಎಐಸಿಸಿ ಕಳುಹಿಸುತ್ತಿದೆ ಎನ್ನಲಾಗಿದೆ.
ಆದರೆ ಪ್ರಿಯಾಂಕ ವಾದ್ರಾ ಕರಾವಳಿಯಲ್ಲಿ ಪ್ರಚಾರ ನಡೆಸುವ ಕುರಿತು ಎಐಸಿಸಿಯಿಂದ ಈವರೆಗೆ ಯಾವುದೇ ಅಧಿಕೃತ ಮಾಹಿತಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ಬಂದಿಲ್ಲ. ಆದರೆ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಿ ಒಂದು ಸುತ್ತಿನ ಪ್ರಚಾರ ಕಾರ್ಯ ನಡೆಸಿದ್ದಾರೆ. ಇದೀಗ ರಾಹುಲ್ ಗಾಂಧಿ ಮತ್ತೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ .
ಕಳೆದ ಬಾರಿ ಮಂಗಳೂರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಈ ಬಾರಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಬಿ. ರಮಾನಾಥ ರೈ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 27 ರಂದು ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಅತ್ಯಂತ ಪ್ರತಿಷ್ಠೆಯ ಕ್ಷೇತ್ರವಾಗಿ ಪರಿಗಣಿಸಿದೆ. ಬಂಟ್ವಾಳ ಕ್ಷೇತ್ರ ದಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದೆ . ಈ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ರಾಹುಲ್ ಗಾಂಧಿ ಪ್ರಚಾರ ಕುತೂಹಲ ಕೆರಳಿಸಿದೆ .
Click this button or press Ctrl+G to toggle between Kannada and English