- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸ್ಥಿರ ಸರ್ಕಾರ ರಚನೆಗೆ ಹೆಚ್‌ಡಿಕೆ ಕಾರ್ಯತಂತ್ರ!

jds-kumarswamy [1]ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ವಿವಾದ, ಗೊಂದಲಗಳಿಗೆ ಅವಕಾಶ ಕೊಡದೆ ಐದು ವರ್ಷಗಳ ಸ್ಥಿರ ಸರ್ಕಾರ ನೀಡಬೇಕೆಂದು ಹೆಚ್.ಡಿ. ಕುಮಾರಸ್ವಾಮಿಯವರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ.

ಸರ್ಕಾರ ರಚನೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಐದು ವರ್ಷಗಳ ಕಾಲ ಸುಗಮವಾಗಿ ಸರ್ಕಾರ ನೀಡಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಂದಾಗಿದ್ದಾರೆ.

ಅಧಿಕಾರ ಹಂಚಿಕೆಯಲ್ಲಿ ತುಸು ಎಡವಟ್ಟು ಮಾಡಿಕೊಂಡರೂ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತಿರುವ ಉಭಯ ಪಕ್ಷಗಳ ನಾಯಕರು ಅಂತಹ ಪರಿಸ್ಥಿಗೆ ಅವಕಾಶ ಕೊಡದೆ ಐದು ವರ್ಷಗಳ ಉತ್ತಮ ಆಡಳಿತ ನೀಡಲು ಅನುಸರಿಸಬೇಕಾದ ಕ್ರಮಗಳ ಕುರಿತು ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ. ನಾಳೆ ಸಂಜೆ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಮಾಣವನ ಸ್ವೀಕರಿಸುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಯಾರನ್ನೆಲ್ಲಾ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎನ್ನುವ ಕುರಿತು ಇಂದು ಸಂಜೆ ಉಭಯ ಪಕ್ಷಗಳ ಹಿರಿಯ ನಾಯಕರು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ.

ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಸೇರಿದಂತೆ ಹಿರಿಯ ನಾಯಕರು ಸಮಾಲೋಚನೆ ನಡೆಸಿ ತಮ್ಮ ತಮ್ಮ ಪಕ್ಷಗಳಿಂದ ಸಂಪುಟ ಸೇರ್ಪಡೆಯಾಗುವವರ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಶಾಸಕಾಂಗ ಪಕ್ಷದ ಸಭೆ ದೇವನಹಳ್ಳಿ ಬಳಿ ಇರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದ್ದು, ಅಲ್ಲಿ ಶಾಸಕಾಂಗ ನಾಯಕನನ್ನಾಗಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಿದ್ದಾರೆ.

ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ಯಾರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಬಗ್ಗೆ ತಮ್ಮದೇನು ತಕರಾರಿಲ್ಲ ಎಂದು ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮತ್ತು ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಜೆ ನಡೆಯಲಿರುವ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಎಲ್ಲಾ ಸಾಧ್ಯತೆಗಳಿವೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಕುಮಾರಸ್ವಾಮಿ ಅವರೊಂದಿಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ತಲಾ ಐದು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿದ್ದು, ಅಳೆದು ತೂಗಿ, ಜಾತಿವಾರು, ಪ್ರದೇಶವಾರು ಲೆಕ್ಕಾಚಾರ ಹಾಕಿ ಪಟ್ಟಿ ಸಿದ್ಧಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಯಾರು ಸಂಪುಟಕ್ಕೆ ಸೇರ್ಪಡೆಗೊಳ್ಳುತ್ತಾರೆ ಎನ್ನುವುದು ನಿಗೂಢವಾಗಿದೆ.