ಬೆಂಗಳೂರು: ಜೂನ್ 11 ರಂದು ನಡೆಯಲಿರುವ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್ ಪ್ರಹ್ಲಾದ್ ಬಾಬು ಅವರನ್ನು ಗೆಲ್ಲಿಸುವ ಮೂಲಕ ದಿವಂಗತ ಬಿ.ಎನ್ ವಿಜಯಕುಮಾರ್ ಅವರ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕರೆ ನೀಡಿದ್ದಾರೆ.
ಜಯನಗರದ ಕೃಷ್ಣ ಕನ್ವೆನ್ಷನ್ ಹಾಲ್ನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಮಟ್ಟದ ಸಮಿತಿ ಸಭೆ ನಡೆಯಿತು. ಬಿ.ಎಲ್ ಸಂತೋಷ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್ ಪ್ರಹ್ಲಾದ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಪಿ.ಎನ್ ಸದಾಶಿವ, ಶಾಸಕರು, ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಬೂತ್ ಸದಸ್ಯರು ಉಪಸ್ಥಿತರಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ಎಲ್ ಸಂತೋಷ್, ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರವನ್ನು ಸಮರೋಪಾದಿಯಲ್ಲಿ ನಡೆಸಿ ಕ್ಷೇತ್ರವನ್ನು ಮತ್ತೆ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವ ರೀತಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
Click this button or press Ctrl+G to toggle between Kannada and English