ಬಂಟ್ವಾಳ: ಹೈಕಮಾಂಡ್ ಅವಕಾಶ ನೀಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪಕ್ಷವು ಪಾರ್ಲಿಮೆಂಟ್ ಚುನಾವಣೆಗೆ ಸಿದ್ಧವಾಗುತ್ತಿದ್ದು, ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ತಾನು ಕೈಗೊಂಡ ಎಲ್ಲ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಇವುಗಳ ಟೆಂಡರ್ ಪ್ರಕ್ರಿಯೆ ಮುಗಿದ ನಂತರ, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಅವರು ಹೇಳೀದರು.
ಬಂಟ್ವಾಳ ಪಟ್ಟಣ ಪ್ರದೇಶದಲ್ಲಿ 56 ಲಕ್ಷ ರೂ. ವೆಚ್ಚದಲ್ಲಿ ಎರಡನೇ ಹಂತದ ಒಳಚರಂಡಿ ಯೋಜನೆ ಕಾಮಗಾರಿಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಇನ್ನೇನಿದ್ದರೂ ಟೆಂಡರ್ ಹಾಗೂ ಮತ್ತಿತರ ಸಣ್ಣ ಪುಟ್ಟ ಕೆಲಸಗಳು ಮಾತ್ರ ಬಾಕಿ ಉಳಿದಿದೆ ಎಂದರು.
ರಮಾನಾಥ ರೈ ಎಂದೂ ಕೆಲಸದಲ್ಲಿ ಉದಾಸೀನ ಮಾಡಿಲ್ಲ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲ ಜನರ ಬೇಡಿಕೆಯಂತೆ ಕೆಲಸ ಮಾಡಿದ್ದೇನೆ. ಆದರೆ ನನ್ನ ಬಗ್ಗೆ ಅಪಪ್ರಚಾರ ಇನ್ನೂ ನಿಂತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕ್ರೀಡಾಂಗಣ ನಿರ್ಮಾಣಕ್ಕೂ ಸರಕಾರಿ ಜಾಗವನ್ನು ಖಾಸಗಿಯವರಿಗೆ ನೀಡಿ ಖಾಸಗಿ ಜಾಗವನ್ನು ಸರಕಾರಕ್ಕೆ ನೀಡಿ 10 ಕೋಟಿ ರೂ. ವೆಚ್ಚದಲ್ಲಿ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಈ ರೀತಿ ಜಾಗವನ್ನು ಬದಲಾವಣೆ ಮಾಡಿರುವುದು ರಾಜ್ಯದಲ್ಲಿ ಇದುಪ್ರಥಮ ಎಂದು ರೈ ತಿಳಿಸಿದರು.
ಶಂಕುಸ್ಥಾಪನೆ ಆದ ಪಶ್ಚಿಮವಾಹಿನಿ ಯೋಜನೆಯ ನೀರಾವರಿ ಯೋಜನೆ, 150 ಕೋಟಿ ರೂ. ವೆಚ್ಚದಲ್ಲಿ ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆಯವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಟೆಂಡರ್ ಕೂಡಾ ಕರೆಯಲಾಗಿದೆ ಶೀಘ್ರವಾಗಿ ಕೆಲಸ ಪ್ರಾರಂಭವಾಗಲಿದೆ ಎಂದು ರಮಾನಾಥ ರೈ ಹೇಳಿದರು.
ಮುಲ್ಲರಪಟ್ನ ಸೇತುವೆ ಪ್ರದೇಶದಲ್ಲಿ 15 ವರ್ಷಗಳ ಹಿಂದೆಯೇ ಇಲ್ಲಿ ಮರಳುಗಾರಿಕೆ ನಡೆಯುತ್ತಿತ್ತು. ಇದೀಗ ಶಿಥಿಲಗೊಂಡು ಮುಲ್ಲರಪಟ್ನ ಸೇತುವೆ ಮುರಿದು ಬಿದ್ದಿದೆ ಎಂದ ರಮಾನಾಥ ರೈ, ಬಿಜೆಪಿ ಸರಕಾರ ಆಡಳಿತದಲ್ಲಿರುವಾಗ ಈ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು. ಅಕ್ರಮ ಮರಳುಗಾರಿಕೆಯ ಹಿಂದೆ ಯಾರು ಇದ್ದಾರೆಂಬುವುದು ಎಲ್ಲರಿಗೂ ತಿಳಿದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಬಿ.ಎಚ್.ಖಾದರ್, ಅಬ್ಬಾಸ್ ಅಲಿ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English