ಬೆಂಗಳೂರು: ವಿಧಾನಸಭೆ ಅಧಿವೇಶನ ಮುಗಿಯುತ್ತಿದ್ದಂತೆ ಮತ್ತೆ ರಾಜ್ಯ ಪ್ರವಾಸಕ್ಕೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಿದ್ಧತೆ ನಡೆಸುತ್ತಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಭೇಟಿ ನೀಡಿ ಸರ್ಕಾರದ ವಿರುದ್ಧ ಆಂದೋಲನ ನಡೆಸಲಿದ್ದಾರೆ ಎನ್ನುವ ಮಾಹಿತಿ ಬಿಜೆಪಿ ಆಪ್ತ ಮೂಲಗಳಿಂದ ಸಿಕ್ಕಿದೆ.
ವಿಧಾನಸಭಾ ಚುನಾವಣೆಗೂ ಮುನ್ನ ಎರಡು ಬಾರಿ ರಾಜ್ಯ ಸುತ್ತಿದ್ದ ಬಿಜೆಪಿ ಯಡಿಯೂರಪ್ಪ ಇದೀಗ ಮತ್ತೆ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ. ಸಾಲಮನ್ನಾ ವಿಚಾರ ಸೇರಿದಂತೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸದ ಮೈತ್ರಿ ಸರ್ಕಾರದ ವಿರುದ್ಧ ಜನರ ಮುಂದೆ ಹೋಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿದ್ದಾರೆ ಎನ್ನಲಾಗ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಿಸುವ ಟಾರ್ಗೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಿದೆ. ಅಭ್ಯರ್ಥಿಗಳ ಆಯ್ಕೆ, ಚುನಾವಣಾ ತಂತ್ರ ಸೇರಿದಂತೆ ಇಡೀ ಚುನಾವಣಾ ಉಸ್ತುವಾರಿ ಯಡಿಯೂರಪ್ಪ ನೋಡಿಕೊಳ್ಳಲಿದ್ದು ಅದಕ್ಕೆ ಪೂರಕವಾಗಿ ಪಕ್ಷ ಸಂಘಟಿಸಲು ಹಾಗು ಜನರ ವಿಶ್ವಾಸಗಳಿಸಲು ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಆಗಸ್ಟ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಷ್ಟರಲ್ಲಿ ಒಂದು ಸುತ್ತಿನ ರಾಜ್ಯ ಪ್ರವಾಸ ಮುಗಿಸಿ ಪಕ್ಷ ಸಂಘಟನೆ ಹಾಗು ಲೋಕಸಭಾ ಚುನಾವಣೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಯಡಿಯೂರಪ್ಪ ನೀಡಲಿದ್ದಾರೆ ಎನ್ನಲಾಗ್ತಿದೆ.
ಕಳೆದ ಬಾರಿ ಪ್ರತಿ ಜಿಲ್ಲೆಗೆ ಹೋಗಿದ್ದ ಯಡಿಯೂರಪ್ಪ ಈ ಬಾರಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ ಪ್ರಚಾರದೊಂದಿಗೆ ಪಕ್ಷ ಸಂಘಟನೆ ಮಾಡಲಿದ್ದಾರೆ. ಬಜೆಟ್ ಮೇಲಿನ ಭಾಷಣಕ್ಕೆ ಕುಮಾರಸ್ವಾಮಿ ನೀಡುವ ಉತ್ತರದ ಮೇಲೆ ಬಿಜೆಪಿ ಹೋರಾಟ ರೂಪಿಸಲಿದೆ ಎಂದು ಈಗಾಗಲೇ ಹೇಳಿದ್ದ ಯಡಿಯೂರಪ್ಪ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದು ಯಾವ ತಂತ್ರ ಹೆಣೆಯುತ್ತಿದ್ದಾರೆ ಎನ್ನುವುದು ನಿಗೂಢವಾಗಿದೆ.
Click this button or press Ctrl+G to toggle between Kannada and English