‘ಕೈಗಾರಿಕಾ ಕ್ಲಸ್ಟರ್’ ಗಳ ಸ್ಥಾಪನೆ ಮೂಲಕ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ: ಹೆಚ್​.ಡಿ. ಕುಮಾರಸ್ವಾಮಿ

1:51 PM, Wednesday, August 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

kumarswamyಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ‘ಕೈಗಾರಿಕಾ ಕ್ಲಸ್ಟರ್’ಗಳ ಸ್ಥಾಪನೆ ಮೂಲಕ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

72ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಹಿಸಿ ಮಾತನಾಡಿದ ಅವರು, ಸ್ಥಳೀಯವಾಗಿ ದೊರೆಯುವ ಕಚ್ಚಾವಸ್ತುಗಳಿಗೆ ಅನುಗುಣವಾಗಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸುವುದರ ಜೊತೆಗೆ ಸ್ಥಳೀಯರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶ ಕಲ್ಪಿಸುವುದು. ಅತ್ಯಂತ ಪ್ರತಿಷ್ಠಿತ ‘ಬೆಂಗಳೂರು ಟೆಕ್ ಸಮಿಟ್’ ಈ ವರ್ಷ ನವೆಂಬರ್ 29 ರಿಂದ ಮೂರು ದಿನಗಳ ಕಾಲ ನಡೆಯಲಿದೆ.

ಪೂರ್ವಭಾವಿಯಾಗಿ ರಾಷ್ಟ್ರದ ಉದ್ದಿಮೆದಾರರೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರವಾಸೋದ್ಯಮ ವಲಯದಲ್ಲಿಯೂ ಉದ್ಯೋಗ ಹೆಚ್ಚಿಸಲು ಇರುವ ಅವಕಾಶಗಳನ್ನು ಗ್ರಾಮೀಣ ಯುವಜನರಿಗೆ ತೆರೆದಿಡಲು ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿದೆ. ಪ್ರವಾಸಿ ಮಾರ್ಗದರ್ಶಿಗಳ ತರಬೇತಿ ಸಂಸ್ಥೆಗಳ ಸ್ಥಾಪನೆಗೆ ಸರ್ಕಾರ ಅವಕಾಶ ಕಲ್ಪಿಸಲಿದೆ. ಉದ್ಯೋಗ ಸೃಷ್ಟಿಯ ಎಲ್ಲ ಅವಕಾಶಗಳನ್ನು ಬಳಸಿಕೊಂಡು, ಬೆಂಗಳೂರಿನಾಚೆಗೂ ಎರಡು ಮತ್ತು ಮೂರನೇ ಸ್ತರದ ನಗರಗಳಿಗೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದರು.

ಎಲ್ಲಾ ವರ್ಗದ ಗ್ರಾಹಕರಿಗೆ ದಿನಪೂರ್ತಿ ವಿದ್ಯುತ್ ಪೂರೈಸಲು ಅಗತ್ಯವಿರುವ ವಿತರಣಾ ಜಾಲದ ಬಲವರ್ಧನೆಗೆ ಒತ್ತು ನೀಡಲಾಗುವುದು. ವಿದ್ಯುತ್ ಸಂಪರ್ಕ ನೀಡಲು ಬಾಕಿ ಇರುವ ಪ್ರತಿ ಮನೆಗೂ ಈ ವರ್ಷ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ರೈತರ ನೀರಾವರಿ ಪಂಪ್ಸೆಟ್ಗಳಿಗೆ ಸಾಧ್ಯವಿರುವ ಕಡೆಗಳಲ್ಲಿ ಹಗಲು ವೇಳೆಯಲ್ಲಿ ಏಳು ಗಂಟೆಗಳ ಕಾಲ ವಿದ್ಯುತ್ಪೂರೈಕೆ ಮಾಡಲಾಗುತ್ತದೆ ಎಂದರು.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ ಮೂಲಭೂತ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಸರ್ಕಾರಿ ಶಾಲೆಗಳ ಆಧುನೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಗ್ರಾಮೀಣ ಮಟ್ಟದಲ್ಲಿ ವಿದ್ಯಾರ್ಥಿನಿಯರಿಗೆ ಪೂರ್ಣ ಪ್ರಮಾಣದ ಶಿಕ್ಷಣ ಒದಗಿಸುವುದುರ ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾದ ವಸತಿ ಕಾಲೇಜುಗಳನ್ನು ಸಹ ಆರಂಭಿಸಲು ಚಿಂತನೆ ನಡೆಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಮೊದಲ ಬಾರಿಗೆ ಕೌಶಲ್ಯ ಆಧಾರಿತ ವಿಶ್ವವಿದ್ಯಾನಿಲಯ ತೆರೆಯಲು ತೀರ್ಮಾನ ಮಾಡಲಾಗಿದೆ. ಶಾಲೆಗಳ ಅಭಿವೃದ್ಧಿಗೆ ಸಹಾಯ ಹಸ್ತ ಚಾಚುವ ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ವಿಸ್ತರಿಸಲಿದೆ. ವಿಜ್ಞಾನವನ್ನು ಅಭ್ಯಸಿಸುವ ಹಾಗೂ ಆ ಕ್ಷೇತ್ರದಲ್ಲಿ ಸಂಶೋಧನೆ ಮಾಡಲು ಇಚ್ಚಿಸುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಯೋಜನೆಯೊಂದನ್ನು ಜಾರಿ ಮಾಡಲಾಗುತ್ತದೆ ಎಂದರು.

ಸರ್ವರಿಗೂ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು. ರಾಜ್ಯ ಸರ್ಕಾರದ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಸೌಲಭ್ಯ ದೊರಕಿಸಲು ಹಲವು ಯೋಜನೆ ರೂಪಿಸಿದೆ. ‘ಆರೋಗ್ಯ ಕರ್ನಾಟಕ’ ಯೋಜನೆಯನ್ನು ಸಾರ್ವಜನಿಕರು ಸುಲಭವಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಸುಧಾರಿಸಲಾಗುವುದು.

ವಿಕಲಚೇತನರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತಿತರ ಶೋಷಿತ ವರ್ಗದವರಿಗೆ ಆಸರೆ ನೀಡಲು ಸರ್ಕಾರ ಸನ್ನದ್ಧವಾಗಿದೆ. ಮಹಿಳೆಯರ ಪೌಷ್ಟಿಕತೆ, ಆರ್ಥಿಕ ಸ್ವಾವಲಂಬನೆ, ದೌರ್ಜನ್ಯ ತಡೆಗೆ ಪ್ರಾಧಾನ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ವಿನೂತನ, ಅತ್ಯುತ್ತಮ ಯೋಜನೆ ಜಾರಿಗೆ ತರಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು. ಪರಿಸರ ಮಾಲಿನ್ಯ ಸಮಸ್ಯೆಗೆ ದೊಡ್ಡಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಉತ್ತಮ ಪಡಿಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ವಾಯುಮಾಲಿನ್ಯ ಹಾಗೂ ಶಬ್ದ ಮಾಲಿನ್ಯಕ್ಕೆ ತುರ್ತು ಪರಿಹಾರ ಒದಗಿಸಲಾಗುದು. ಹಸಿರು ಕರ್ನಾಟಕ ಯೋಜನೆಯಡಿ ರಾಜ್ಯದೆಲ್ಲೆಡೆ ಸರ್ಕಾರಿ ಜಮೀನಿನಲ್ಲಿ ಗಿಡ ನೆಡುವ ಬೃಹತ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗುತ್ತದೆ.

ರಾಜ್ಯದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣ ಮಾಡಲಾಗುದು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾಡಳಿತಗಳ ನಡುವೆ ಸಮನ್ವಯ ಸಾಧಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರತಿ ತಿಂಗಳಿಗೊಮ್ಮೆ ವಿಡಿಯೋ ಸಂವಾದ ನಡೆಸಲಾಗುತ್ತದೆ ಎಂದರು.

ಬೆಂಗಳೂರಿಗೆ ವಿಶ್ವದರ್ಜೆಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕಾದದ್ದು ನಮ್ಮ ಮುಂದಿರುವ ದೊಡ್ಡ ಸವಾಲು. ಈ ನಿಟ್ಟಿನಲ್ಲಿ ಇರುವ ತೊಡಕುಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುತ್ತಿದೆ. ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಮೆಟ್ರೋ ಎರಡನೇ ಹಂತ, ಪೆರಿಫೆರಲ್ ರಿಂಗ್ ರೋಡ್, ಉಪ ನಗರ ರೈಲು ಯೋಜನೆಗಳನ್ನು ಶೀಘ್ರವಾಗಿ ಸಾಕಾರಗೊಳಿಸಲು ಪ್ರಯತ್ನ ಮಾಡಲಾಗುವುದು.

ಬೆಂಗಳೂರಿನ ಕೆರೆಗಳ ಸಂರಕ್ಷಣೆ, ತ್ಯಾಜ್ಯವಸ್ತುಗಳ ವೈಜ್ಞಾನಿಕ ವಿಲೇವಾರಿ ಕುರಿತು ಸಹ ದೂರದೃಷ್ಟಿಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಬೆಂಗಳೂರು ಫ್ಲೆಕ್ಸ್ ಮುಕ್ತವಾಗಬೇಕು ಎನ್ನುವುದು ಬೆಂಗಳೂರಿಗರ ಆಸೆ. ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯ ಫ್ಲೆಕ್ಸ್ ಮುಕ್ತವಾಗಬೇಕು ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English