ಬೆಂಗಳೂರು: ಬಿಬಿಎಂಪಿ ಉಪ ಮಹಾಪೌರರಾದ ರಮಿಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದು ಬೆಂಗಳೂರಿಗೆ ಆಗಮಿಸಿ, ಸಂಜೆ 5 ಗಂಟೆಗೆ ಉಪ ಮೇಯರ್ ರಮಿಳಾ ಉಮಾಶಂಕರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಪ ಮೇಯರ್ ರಮಿಳಾ ಉಮಾಶಂಕರ್ ನಿಧನಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಅವರು, ತಮ್ಮ ಸಂಘಟನಾ ಚಾತುರ್ಯದಿಂದಲೇ ಬೆಂಗಳೂರು ಮಹಾನಗರದ ಉಪಮೇಯರ್ ಹುದ್ದೆಯನ್ನು ಅಲಂಕರಿಸಿದ್ದರು. ಅವರ ಅಕಾಲಿಕ ನಿಧನದಿಂದ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ವಿಶ್ವನಾಥ್ ಅವರು ಇಂದು ಬೆಳಗ್ಗೆ 11.30 ಕ್ಕೆ ಮೃತರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಲಿದ್ದಾರೆ.
Click this button or press Ctrl+G to toggle between Kannada and English