ಮಂಗಳೂರು: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಆರೋಗ್ಯ ಶಿಬಿರ ಮೊದಲಾದ ಸೇವಾ ಕಾರ್ಯಗಳಿಂದ ನಿರಂತರವಾಗಿ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿದ್ದಾರೆ. ವಿಜಯಾ ಬ್ಯಾಂಕ್ ಉದ್ಯೋಗಿಯಾಗಿದ್ದ ಕೃಷ್ಣ ಕುಮಾರ್ ಪೂಂಜಾ 2001ರಿಂದ ಸ್ವಯಂ ನಿವೃತ್ತಿ ಪಡೆದುಕೊಂಡು ಸದ್ಯ ಹಲವಾರು ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಕಳೆದ 20 ವರ್ಷಗಳಿಂದ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ, 99 ಬಾರಿ ರಕ್ತದಾನ ಶಿಬಿರ, ಕಣ್ಣಿನ ಚಿಕಿತ್ಸಾ ಶಿಬಿರ, ದಂತ ಚಿಕಿತ್ಸಾ ಶಿಬಿರ ನಡೆಸಿಕೊಂಡು ಬಂದಿರುವ ಅವರು, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಜನಶ್ರೀ ವಿಮಾ ಯೋಜನೆಯಡಿ ವಿಮಾ ಸೌಲಭ್ಯಗಳನ್ನು ನೀಡುತ್ತಾ ಬಂದಿದ್ದಾರೆ.
ಕಲೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ಇವರ ಸೇವಾ ಮನೋಭಾವವನ್ನು ಗುರುತಿಸಿ ಈಗಾಗಲೇ ಹಲವಾರು ಪ್ರಶಸ್ತಿ ಸನ್ಮಾನಗಳು ಅರಸಿಕೊಂಡು ಬಂದಿದೆ. ಇದೀಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು, ನವೆಂಬನರ್ 29ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
Click this button or press Ctrl+G to toggle between Kannada and English