ಮಂಗಳೂರು : ಇಂದು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೇ ಜೂನ್ 30 ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿತ್ತು. ವಿಮಾನ ಇನ್ನು 20 ಅಡಿ ಮುಂದಕ್ಕೆ ಚಲಿಸಿದ್ದರೆ, ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಈ ಹಿಂದೆ 2010ರ ಮೇ 22ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು.
ಆದ್ದರಿಂದ ಈ ಕೂಡಲೇ ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲ ಸೌಲಭ್ಯಗಳ ಅಭಿವೃದ್ಧಿ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಹಾಗೂ ಈ ಘಟನೆ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಸಂಸದರು ಆಗ್ರಹಿಸಿದರು.
Click this button or press Ctrl+G to toggle between Kannada and English