- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದೇವಸ್ಥಾನಗಳಿಗೆ ವಾರ್ಷಿಕ ಅನುದಾನ ಹೆಚ್ಚಳಕ್ಕೆ ಚಿಂತನೆ : ಕೋಟಾ ಶ್ರೀನಿವಾಸ್‌ ಪೂಜಾರಿ

kota [1]ಶಿವಮೊಗ್ಗ : ಆರ್ಥಿಕ ಸಂಕಷ್ಟದಲ್ಲಿರುವ 27 ಸಾವಿರ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ವಾರ್ಷಿಕ ಅನುದಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಾಗಲೇ ಪ್ರತೀ ವರ್ಷ ಆರ್ಥಿಕ ಸಂಕಷ್ಟದಲ್ಲಿರುವ 27 ಸಾವಿರ ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ 48 ಸಾವಿರ ಅನುದಾನವನ್ನು ನೀಡಲಾಗುತ್ತಿದೆ. ಇದನ್ನು ಮುಂಬರುವ ದಿನಗಳಲ್ಲಿ ಹೆಚ್ಚಿಸಲಾಗುವುದು ಎಂದರು.

ರಾಜ್ಯದಲ್ಲಿರುವ 25 ಸಾವಿರ ಮೀನು ಗಾರರಿಗೆ ಮನೆಗಳನ್ನು ನಿರ್ಮಿಸಿಕೊಡುವ ನಿಟ್ಟಿನಲ್ಲಿ ನಮ್ಮ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಧಾರ್ಮಿಕ ಪರಿಷತ್‌ನ್ನು ನಿರ್ಮಾಣ ಮಾಡುವ ಮೂಲಕ ರಾಜ್ಯದ ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಹೊಸ ಕಾಯಕಲ್ಪ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಒಟ್ಟು 523 ದೇವಾಲಯಗಳಿಗೆ ತಸ್ತೀಕ್‌ ಯೋಜನೆ ಯಡಿ ವಾರ್ಷಿಕ 48 ಸಾವಿರ ರೂ. ನೀಡಲಾಗುತ್ತಿದೆ. ಇದರಲ್ಲಿ ಪೂಜಾ ಸಾಮಗ್ರಿ ಖರೀದಿಗೆ ಹಾಗೂ ಉಳಿದ ಮೊತ್ತವನ್ನು ಅರ್ಚಕರಿಗೆ ಗೌರವ ಧನವಾಗಿ ಬಳಸಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲಿಸಲಾಗುವುದು. ನಗರದ ಕೋಟೆ ಆಂಜನೇಯ ದೇವಾಲಯದ ಜಮೀನಿನ ಸರ್ವೆ ಕಾರ್ಯ ಕೈಗೊಳ್ಳುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಮುಜರಾಯಿ ದೇವಾಲಯಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಅವರಿಗಿದ್ದ ಹಣಕಾಸು ಅಧಿಕಾರವನ್ನು 50 ಲಕ್ಷ ರೂ. ನಿಂದ ಒಂದು ಕೋಟಿಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು. ದೇವಾಲಯಗಳ ಪುನರುಜ್ಜೀವನ ಇತ್ಯಾದಿ ಕುಶಲ ಕಾರ್ಯ ಗಳನ್ನು ಕೈಗೊಳ್ಳಲು ಸಾಧ್ಯವಾಗುವಂತೆ ಮುಜರಾಯಿ ಇಲಾಖೆಯಲ್ಲಿ ಪ್ರತ್ಯೇಕ ಇಂಜಿನಿಯರಿಂಗ್‌ ವಿಭಾಗ ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿ ಇರುವ ಮಾದರಿಯಲ್ಲಿ ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಮತ್ಸ್ಯ ದರ್ಶಿನಿ ಹೊಟೇಲುಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಇನ್ನಷ್ಟು ಮೀನು ಮಾರಾಟ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ನಿಷ್ಕ್ರಿಯವಾಗಿರುವ ಮೀನುಗಾರಿಕಾ ಸಹಕಾರ ಸಂಘಗಳನ್ನು ಗುರುತಿಸಿ ಅವುಗಳಿಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಸ್ಥಗಿತ ಗೊಳಿಸಲು ಕ್ರಮ ಕೈಗೊಳ್ಳಬೇಕು. ಮೀನುಗಾರರಿಗೆ ಈ ವರ್ಷ ಎರಡುವರೆ ಸಾವಿರ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಸ್ಥಳೀಯವಾಗಿ ಶಾಸಕರಿಂದ ಫಲಾನುಭವಿಗಳ ಪ್ರಸ್ತಾವನೆ ಗಳನ್ನು ಪಡೆಯುವಂತೆ ಅವರು ಸೂಚಿಸಿದರು. ಜಿಲ್ಲೆಯಲ್ಲಿ ಒಳನಾಡು ಜಲಸಾರಿಗೆ ಆರಂಭಿಸಲು ಸಾಧ್ಯವಿರುವ ಜಲಮಾರ್ಗಗಳನ್ನು ಗುರುತಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಬಿ.ವೈ. ರಾಘವೇಂದ್ರ ಮಾತನಾಡಿ, ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿದ ಪರಿಣಾಮ ಇಂದು ರಾಜ್ಯದ ಸಚಿವರಾಗುವಂತಹ ಅವಕಾಶವನ್ನು ಪಕ್ಷ ಕೋಟ ಶ್ರೀನಿವಾಸ್‌ ಪೂಜಾರಿ ಅವರಿಗೆ ಕಲ್ಪಿಸಿಕೊಟ್ಟಿದೆ. ಇದಕ್ಕೆ ಅವರ ಸರಳತೆಯೇ ಕಾರಣವಾಗಿದೆ ಎಂದರು.