ಕಲಬುರಗಿ : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಕಲಬುರಗಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಇಲ್ಲಿನ ಪರಿಸ್ಥಿತಿಯಲ್ಲಿ ಅಧಿವೇಶನ ನಡೆಸುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು.
ವಿಧಾನಸಭೆ ಅಧಿವೇಶನ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ವಾಡಿಕೆಯಂತೆ ಪ್ರತಿ ಚಳಿಗಾಲದ ಅಧಿವೇಶನವು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿತ್ತು.
ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಹಿರಿಯ ಸಚಿವರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತವಾಗಿದೆ. ಆಡಳಿತ ಯಂತ್ರ ಅಲ್ಲಿಗೆ ವರ್ಗಾವಣೆಯಾದರೆ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಈಗಾಗಲೇ ನೆರೆ ಹಾನಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಪ್ರಕಟವಾಗದೇ ಇರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ವಿರೋಧಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಅದರ ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಇರುವುದು ಅವರಿಗೆ ಅಸ್ತ್ರವಾಗಿ ಸಿಗಲಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಪರಿಹಾರ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜನರು ಹೆಚ್ಚಿನ ಪ್ರತಿಭಟನೆಗಳನ್ನು ನಡೆಸುತ್ತಾರೆ. ಇದರಿಂದ ಸರ್ಕಾರ ಮುಜುಗರ ಎದುರಿಸಬೇಕಾಗುತ್ತದೆ ಎನ್ನುವುದು ಕೂಡ ಸರ್ಕಾರದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.
Click this button or press Ctrl+G to toggle between Kannada and English