ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಗ್ರಾಮ ಪಂಚಾಯಿತಿಗೆ ಪಾವತಿಸಬೇಕಿದ್ದ 45,26,688 ರೂ. ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದೆ.
ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯತಿಗೆ ವ್ಯಾಪ್ತಿಯಲ್ಲಿ ಇರುವ ಮೆಡಿಕಲ್ ಕಾಲೇಜ್ ಗ್ರಾಮ ಪಂಚಾಯಿತಿಗೆ ಲಕ್ಷ ಲಕ್ಷ ತೆರಿಗೆಯನ್ನು ಕಟ್ಟಬೇಕಿದೆ. ಈ ವಿಚಾರವಾಗಿ ಗ್ರಾಮ ಪಂಚಾಯತಿ ಕಾರ್ಯಾಲಯ ಸಾಕಷ್ಟು ಬಾರಿ ನೋಟಿಸ್ ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ತೆರಿಗೆ ಮಾತ್ರ ಕಟ್ಟಿರಲಿಲ್ಲ.
ಈ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಬ್ಲಾಕ್ ಮಾಡಿ ಅಕ್ರಮವಾಗಿ ಹಣ ಸಂಗ್ರಹಣೆ ಮಾಡುತ್ತಿದೆ ಎಂಬ ಆರೋಪವು ಕೇಳಿ ಬಂದಿದೆ. ಈ ವಿಚಾರವಾಗಿ ಇಬ್ಬರು ವಿದ್ಯಾರ್ಥಿಗಳು ನಮ್ಮ ಸೀಟ್‍ನ್ನು ಬ್ಲಾಕ್ ಮಾಡಲಾಗಿತ್ತು ಎಂದು ಐಟಿ ಅಧಿಕಾರಗಳ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಎರಡು ರೀತಿಯಲ್ಲಿ ಸೀಟ್ ಗಳು ವಿದ್ಯಾರ್ಥಿಗಳಿಗೆ ಲಭ್ಯ ಇರುತ್ತದೆ. ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಸರ್ಕಾರಿ ಸೀಟ್ ಸಿಕ್ಕುತ್ತದೆ. ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯದವರು ಅಥವಾ ಪರೀಕ್ಷೆಯೇ ಬರೆಯದ ವಿದ್ಯಾರ್ಥಿಗಳು ಮ್ಯಾನೇಜ್‍ಮೆಂಟ್ ಕೋಟಾದ ಅಡಿ ಪ್ರವೇಶ ಪಡೆಯುತ್ತಾರೆ.
ನೀಟ್ ಪರೀಕ್ಷೆಯಲ್ಲಿ ಉತ್ತಮ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳನ್ನು ಖಾಸಗಿ ಕಾಲೇಜುಗಳಲ್ಲಿ ಈ ಸೀಟ್ ಬ್ಲಾಕ್ ಅವ್ಯವಹಾರಕ್ಕೆ ಬಳಸಲಾಗುತ್ತದೆ. ನೀಟ್ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಯೊಬ್ಬ ಯಾವುದೋ ರಾಜ್ಯದ ಕಾಲೇಜು ಸೇರುತ್ತೇನೆ ಎಂದು ಹೇಳುತ್ತಾನೆ. ಸರ್ಕಾರದ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ವಿದ್ಯಾರ್ಥಿ ಕಾಲೇಜಿಗೆ ದಿಢೀರ್ ಯಾವುದೋ ಕಾರಣ ನೀಡಿ ರದ್ದು ಪಡಿಸುವುದಾಗಿ ಮಾಹಿತಿ ನೀಡುತ್ತಾನೆ. ಈ ಹಂತದಲ್ಲಿ ರಾಜ್ಯ ಸರ್ಕಾರಕ್ಕೆ ಕೌನ್ಸಿಲಿಂಗ್ ನಡೆಸಿ ಮತ್ತೆ ಈ ಸೀಟ್ ಅನ್ನು ಹಂಚಿಕೆ ಮಾಡಲು ಸಾಧ್ಯವೇ ಇಲ್ಲ.
ಈ ಸಂದರ್ಭದಲ್ಲಿ ಮ್ಯಾನೇಜ್‍ಮೆಂಟ್ ಈ ಸೀಟ್ ಅನ್ನು ಬೇರೊಬ್ಬ ವಿದ್ಯಾರ್ಥಿಗೆ ಲಕ್ಷ, ಕೋಟಿ ರೂ.ಗೆ ಮಾರಾಟ ಮಾಡುತ್ತದೆ. ಸೀಟ್ ಬ್ಲಾಕ್ ಮಾಡುವ ವಿಚಾರ ಮೊದಲೇ ಪೂರ್ವ ನಿರ್ಧಾರವಾಗಿರುತ್ತದೆ. ಅಂತಿಮವಾಗಿ ದಲ್ಲಾಳಿ, ವಿದ್ಯಾರ್ಥಿ ಮತ್ತು ಕಾಲೇಜಿನ ಆಡಳಿತ ಮಂಡಳಿ ಈ ತಮ್ಮ ತಮ್ಮ ಪಾಲನ್ನು ಹಂಚಿಕೊಳ್ಳುತ್ತಾರೆ.
Click this button or press Ctrl+G to toggle between Kannada and English