ಕರಾವಳಿ ಕಾವಲು ಪೊಲೀಸ್ ಬಲವರ್ಧನೆಗೆ ಸರ್ಕಾರದ ಕ್ರಮ : ಬಸವರಾಜ ಬೊಮ್ಮಾಯಿ ಹೇಳಿಕೆ

11:22 AM, Friday, October 25th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

basavarajಬಂಟ್ವಾಳ : ಕರಾವಳಿ ಕಾವಲು ಪೊಲೀಸ್ ಪಡೆ ಬಲವರ್ಧನೆಗೊಳಿಸಿ, ತೀರ ಪ್ರದೇಶ ಸುರಕ್ಷತೆಗೆ ಗರಿಷ್ಠ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಭದ್ರತಾ ಪಡೆಗೆ ಅಗತ್ಯ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗೃಹಸಚಿವರು ಗುರುವಾರ ಬೆಳಗ್ಗೆ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಸಿದರು. ಪಶ್ಚಿಮ ವಲಯದ ಐಜಿಪಿ ಅರುಣ್ ಚಕ್ರವರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ಲಕ್ಷ್ಮಿಪ್ರಸಾದ್, ಉಡುಪಿ ಎಸ್ಪಿ ನಿಶಾ ಜೇಮ್ಸ್, ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡೆ, ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಕರಾವಳಿ ಭಾಗದಲ್ಲಿ ರಾತ್ರಿ ಪೊಲೀಸ್ ಸಂಚಾರ ಹೆಚ್ಚಿಸಲು ಈಗಾಗಲೇ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದರು.

ರಾಜ್ಯದಲ್ಲಿ ಅತಿ ಹೆಚ್ಚು ಪೊಲೀಸ್ ವಸತಿಗೃಹಗಳಿವೆ. ಶೇ.60ರಷ್ಟು ಇರುವ ವಸತಿಗೃಹ ಸಂಖ್ಯೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಶೇ.80ಕ್ಕೆ ಏರಿಸುವ ಗುರಿ ಇದೆ. ರಾತ್ರಿ ಡ್ಯೂಟಿ ಮಾಡುವ ಪೊಲೀಸರ ಜತೆ ಜನರನ್ನೂ ಪಾಲ್ಗೊಳ್ಳುವಂತೆ ಮಾಡುವ ಜನಸ್ನೇಹಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಗೃಹರಕ್ಷಕದಳದ ಸಿಬ್ಬಂದಿ ವೇತನ ಪಾವತಿ ವಿಳಂಬ ಬಗ್ಗೆ ಡಿಐಜಿ ಅಧ್ಯಯನ ನಡೆಸುತ್ತಿರುವುದಾಗಿ ತಿಳಿಸಿದರು.

ಬಂಟ್ವಾಳ ಕೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ ಸದಸ್ಯ ಗೋವಿಂದ ಪ್ರಭು, ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್ ಜಿ.ಕೆ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ತಾಪಂ ಸದಸ್ಯ ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಉದಯಕುಮಾರ್ ರಾವ್ ಬಂಟ್ವಾಳ, ರಮಾನಾಥ ರಾಯಿ, ಸುದರ್ಶನ್ ಬಜ ಮೊದಲಾದವರಿದ್ದರು.

ಇದಕ್ಕೂ ಮೊದಲು ಗೃಹಸಚಿವರು ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸ್ವೀಕರಿಸಿದರು. ಶಾಸಕ ಯು.ರಾಜೇಶ್ ನಾಕ್ ಹಾಗೂ ತಹಸೀಲ್ದಾರ್ ರಶ್ಮಿ ಎಸ್.ಆರ್. ಸ್ವಾಗತಿಸಿದರು. ಬಂಟ್ವಾಳ ಸರ್ಕಲ್ ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್, ಎಸ್‌ಐಗಳಾದ ಚಂದ್ರಶೇಖರ್, ಪ್ರಸನ್ನ ಸಹಿತ ವಿವಿಧ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಬಂದೋಬಸ್ತ್ ವಹಿಸಿದ್ದರು.

ಬಂಟ್ವಾಳ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಬಂಟ್ವಾಳ ನಗರ ಹಾಗೂ ಗ್ರಾಮಾಂತರಕ್ಕೆ ಪ್ರತ್ಯೇಕ ವೃತ್ತನಿರೀಕ್ಷಕರನ್ನು ನೇಮಿಸಲಾಗುವುದು. ಇದರಿಂದ ಪೊಲೀಸ್ ಸಿಬ್ಬಂದಿ ಸಂಖ್ಯೆ ಹೆಚ್ಚಳವಾಗಲಿದ್ದು, ಸೂಕ್ಷ್ಮ ಪ್ರದೇಶವಾದ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹಸಚಿವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸ್ಥಳಾಂತರದ ಬಗ್ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಗೃಹಸಚಿವರು ತಿಳಿಸಿದರು. ಎಸ್‌ಪಿ ಕಚೇರಿಯನ್ನು ಬಂಟ್ವಾಳ ಅಥವಾ ಪುತ್ತೂರಿಗೆ ಸ್ಥಳಾಂತರಿಸಬೇಕು ಎಂಬ ಬೇಡಿಕೆ ಇರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.

ಉಡುಪಿ ಕರಾವಳಿ ಭಾಗಗಳಿಗೆ ಹೊರರಾಜ್ಯಗಳಿಂದ ಮಾದಕ ವಸ್ತುಗಳು ಬರುವ ಬಗ್ಗೆ ಮಾಹಿತಿಯಿದ್ದು, ಇದನ್ನು ತಡೆಗಟ್ಟಲು ರಾಜ್ಯ ಗೃಹ ಇಲಾಖೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಮಂಗಳೂರು ಮತ್ತು ಮಣಿಪಾಲದಲ್ಲಿ ಪೊಲೀಸ್ ಠಾಣೆ ತೆರೆಯಲಾಗುತ್ತದೆ. ಇದಕ್ಕೆ ಬೇಕಾದ ಸಿಬ್ಬಂದಿ, ವಾಹನ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English