ಮಡಿಕೇರಿ : ವಾಮಮಾರ್ಗದಲ್ಲಿ ಸರ್ಕಾರ ರಚನೆಗೆ ಮುಂದಾದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ವತ: ಹೇಳಿಕೊಂಡ ಆಡಿಯೋ ವೈರಲ್ ಆಗಿದ್ದು, ಇದನ್ನೇ ಸೂಕ್ತ ಸಾಕ್ಷ್ಯವೆಂದು ಪರಿಗಣಿಸಿ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಬಿಜೆಪಿ, ಸಿಎಂ ಯಡಿಯೂರಪ್ಪ, ಕೇಂದ್ರ ಸರ್ಕಾರ ಮತ್ತು ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರ ರಾಜೀನಾಮೆ ಕೊಡಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಷಡ್ಯಂತರ ಮಾಡಿರುವ ಬಗ್ಗೆ ವೈರಲ್ ಆದ ವಿಡಿಯೋ ಸಾಕ್ಷಿ ಹೇಳಿದೆ. ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸಿರುವುದು ಸತ್ಯ ಎಂದು ಸಾಬೀತಾಗಿದೆ. ಈ ರೀತಿಯ ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಚಟುವಟಿಕೆಗಳು ಸಮಾಜಕ್ಕೆ ಮಾರಕವಾಗಿದೆ ಎಂದು ಆರೋಪಿಸಿದರು.
ಒಂದೆಡೆ ಆರ್ಥಿಕ ಜ್ಞಾನದ ಕೊರತೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರ ದೇಶದ ಜನರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಮತ್ತೊಂದೆಡೆ ಅಭಿವೃದ್ಧಿ ಹಾಗೂ ಮಳೆಹಾನಿ ಸಂತ್ರಸ್ತರ ಬಗ್ಗೆ ಗಮನ ಹರಿಸದ ರಾಜ್ಯ ಸರ್ಕಾರ ಟಿಪ್ಪುವಿನ ಹೆಸರಿನಲ್ಲಿ ಭಾವನೆಗಳನ್ನು ಕೆಣಕಿ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ವಿಜ್ಞಾನ ಮತ್ತು ಇತಿಹಾಸವನ್ನು ಯಾರಿಂದಲೂ ಮರೆಮಾಚಲು ಸಾಧ್ಯವಿಲ್ಲವೆಂದು ಅಭಿಪ್ರಾಯಪಟ್ಟ ಮಂಜುನಾಥ್ ಕುಮಾರ್, ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಆಪರೇಷನ್ ಕಮಲಕ್ಕೆ ಕಾರಣಕರ್ತರಾದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೇಂದ್ರ ಸಂಪುಟದಿಂದ ಕೈ ಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಕೆ.ಪಿ.ಸಿ.ಸಿ. ಹಿರಿಯ ಮುಖಂಡ ಮಿಟ್ಟುಚಂಗಪ್ಪ, ಸದಸ್ಯ ಟಿ.ಪಿ.ರಮೇಶ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಎಂ.ಎ.ಉಸ್ಮಾನ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಆರ್.ಪಿ.ಚಂದ್ರಶೇಖರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಯೋಜಕ ತೆನ್ನಿರಾ ಮೈನಾ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪಾರ್ವತಿ ಫ್ಯಾನ್ಸಿ, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯ ಪ್ರಕಾಶ್ ಆಚಾರ್ಯ, ನಂದಕುಮಾರ್, ಯುವ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಹನೀಪ್ ಸಂಪಾಜೆ, ಕುಶಾಲನಗರ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ದೇವ್ ಮತ ಆಸೀಫ್, ಮಡಿಕೇರಿ ನಗರ ಅಧ್ಯಕ್ಷ ಸದಾ ಮುದ್ದಪ್ಪ, ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿ ಉದಯ ಚಂದ್ರಿಕ, ಮಿನಾಜ್ ಪ್ರವೀಣ್, ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್, ಪ್ರಮುಖರಾದ ಎ.ಜೆ.ಬಾಬು, ಸಂಪನ್ ಸೋಮಣ್ಣ, ಜಮ್ಮಂಡ ಸೋಮಣ್ಣ, ಮುರುಗ, ಟಿ.ಈ.ಸುರೇಶ್, ಕೆ.ಎಂ.ಲೋಕೇಶ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English