ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ನ.12ರಂದು ನಡೆದ ಚುನಾವಣೆಯ ಮತ ಎಣಿಕೆ ನಾಳೆ ನ.14ರಂದು ನಗರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ ವಿವಿಧ ಪಕ್ಷಗಳ ಅಭ್ಯರ್ಥಿಗಳು, ಪಕ್ಷಗಳ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತ ಸೇರಲಿರುವ ಮಾಹಿತಿ ಲಭ್ಯವಾಗಿದ್ದು, ಇದರಿಂದ ಸಾರ್ವಜನಿಕರ ಜೀವ, ಸೊತ್ತುಗಳಿಗೆ ಅಪಾಯ, ಹಾನಿಯಾಗುವ ಸ್ಯಾತೆ ಇದೆ. ಇದನ್ನು ತಡೆಯುವ ಉದ್ದೇಶದಿಂದ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸುತ್ತ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ನಿಷೇಧದ ಅವಧಿಯಲ್ಲಿ ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿಗಳು, ಗದೆ, ಬಂಧೂಕು, ಚಾಕು, ಕೋಲು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಇತರ ಯಾವುದೇ ವಸ್ತುಗಳನು ಒಯ್ಯುವಂತಿಲ್ಲ. ಪಟಾಕಿ ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕ ಒಯ್ಯುವಂತಿಲ್ಲ. ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರಾಜಕೀಯ ಸಭೆ ಸಮಾರಂಭ ನಡೆಸುವಂತಿಲ್ಲ. ಕಲ್ಲು ಅಥವಾ ಇತರ ಕ್ಷಿಪಣಿ ಎಸೆಯುವುದು ಅಥವಾ ವೇಗದಿಂದ ಒಗೆಯುವ ಸಾಧನ ಮತ್ತು ಉಪಕರಣಗಳನ್ನು ಬಳಸುವಂತಿಲ್ಲ. ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟುಮಾಡುವ ಅಥವಾ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧ ಮಾಡಲು ಪ್ರಚೋದಿಸುವ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡು ಹಾಡುವುದು, ಸಂಗೀತ ನುಡಿಸುವುದು, ಆವೇಶದ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರ, ಸಂಕೇತ, ಭಿತ್ತಿಪತ್ರ ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಹರ್ಷಾ ಪಿ.ಎಸ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English