ಮಿಷನ್ ಇಂದ್ರ ಧನುಷ್ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿ : ಜಿಲ್ಲಾಧಿಕಾರಿ ಸೂಚನೆ

11:02 AM, Tuesday, November 19th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Madikeri

ಮಡಿಕೇರಿ : ಜಿಲ್ಲೆಯಾದ್ಯಂತ ಡಿ.2 ರಿಂದ 10 ರವರೆಗೆ ನಡೆಯುವ ಮೊದಲನೇ ಸುತ್ತಿನ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಯಶಸ್ವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಿಷನ್ ಇಂದ್ರಧನುಷ್ ಮತ್ತು ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಿಷನ್ ಇಂದ್ರಧನುಷ್ ಅಭಿಯಾನದಲ್ಲಿ ಯಾವುದೇ ಮಗು ಮತ್ತು ಗರ್ಭಿಣಿಯರು ಲಸಿಕೆ ಹಾಗೂ ಚುಚ್ಚುಮದ್ದಿನಿಂದ ವಂಚಿತರಾಗಬಾರದು. ಈ ಲಸಿಕೆಯನ್ನು ತಪ್ಪದೇ ನೀಡಬೇಕು. ಮತ್ತು ಅದರ ಪ್ರಯೋಜನಗಳ ಬಗ್ಗೆ ಮಹಿಳೆಯರು ಹಾಗೂ ಗರ್ಭಿಣಿಯರಲ್ಲಿ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಎಲ್ಲಾ ಆರೋಗ್ಯ ಕಾರ್ಯಕರ್ತೆಯರು ತಮ್ಮ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಗರ್ಭಿಣಿಯರು ಮತ್ತು ಒಂದು ಮಗುವೂ ಬಿಟ್ಟು ಹೋಗದ ರೀತಿಯಲ್ಲಿ ಯೋಜನೆಯನ್ನು ರೂಪಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಲಸಿಕೆಯನ್ನು ಹೇಗೆ ನೀಡಬೇಕು ಎಂಬುದರ ಬಗ್ಗೆ ತರಬೇತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ತಲುಪಲು ಕಷ್ಟಕರವಾದ ಪ್ರದೇಶಗಳ ಕಡೆ ಹೆಚ್ಚಿನ ಗಮನಹರಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ವಿಭಾಗದ ಡಬ್ಲ್ಯುಎಚ್‌ಒ ಸಲಹೆಗಾರರಾದ ಡಾ.ಸುದೀರ್ ನಾಯಕ್ ಅವರು ಮಾತನಾಡಿ ಲಸಿಕೆ ಕಾರ್ಯಕ್ರಮದಿಂದ ದೂರ ಉಳಿದಿರುವ ಗರ್ಭಿಣಿಯರು ಮತ್ತು ಮಕ್ಕಳಿಗೆ ಲಸಿಕೆಯನ್ನು ತಲುಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತರು ಇಲ್ಲದ ಕಡೆ ಅಂಗನವಾಡಿ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದ್ದು, ಅಗತ್ಯ ಔಷಧಗಳ ದಾಸ್ತಾನುಗಳು ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.

ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾತನಾಡಿ ಲಸಿಕೆಯಿಂದ ವಂಚಿತರಾದ ಮಕ್ಕಳು ಮತ್ತು ಗರ್ಭಿಣಿಯರನ್ನು ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಸಮೀಕ್ಷೆ ನಡೆಸಿ ಲಸಿಕೆಯನ್ನು ಹಾಕಲಾಗುತ್ತದೆ ಎಂದು ತಿಳಿಸಿದರು.

ಶಾಲಾ ಲಸಿಕಾ ಅಭಿಯಾನ:-ಶಾಲಾ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಲ್ಲಿ 10ನೇ ತರಗತಿವರೆಗಿನ ಮಕ್ಕಳಿಗೆ ’ಟಿಡಿ’ ಲಸಿಕೆಯನ್ನು ಹಾಕಲಾಗುವುದು. ಲಸಿಕೆ ವಂಚಿತರು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವಂತೆ ಅವರು ಸೂಚಿಸಿದರು.

ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ತಿಳಿಸಿದರು.
ಪ್ರತೀ ಶಾಲೆಗಳಲ್ಲೂ ಲಸಿಕೆಯನ್ನು ನೀಡುವುದರ ಬಗ್ಗೆ ಜಾಗೃತಿಯನ್ನು ಮೂಡಿಸಲು ಕ್ರಮಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಡಿಸೆಂಬರ್, 11 ರಿಂದ 31 ರವರೆಗೆ ಶಾಲಾ ಲಸಿಕಾ ಅಭಿಯಾನ ನಡೆಯಲಿದೆ ಎಂದು ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮೈಸೂರು ವಿಭಾಗದ ಡಬ್ಲ್ಯುಎಚ್‌ಒ ಸಲಹೆಗಾರರಾದ ಡಾ.ಸುದೀರ್ ನಾಯಕ್, ವೈದ್ಯಕೀಯ ಅಧೀಕ್ಷಕರಾದ ಡಾ.ಲೋಕೇಶ್, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಡಾ.ಕೃಷ್ಣಾನಂದ, ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಹಾಜರಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English