ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಲೊರಟ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಭಾರತೀಯ ಮುಸ್ಲಿಮರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ಧಾರೆ. ‘ಭಾರತೀಯರೆಲ್ಲರೂ ಒಂದು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಇದು ಬೇರೆ ದೇಶದಿಂದ ಬರುವ ಅಕ್ರಮ ವಲಸಿಗರಿಗೆ ಸಂಬಂಧಿಸಿದ ಕಾನೂನು. ಹಾಗಾಗಿ ಇದರ ಸಂಬಂಧಿತ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಹಿಂಸಾಚಾರ ಹೆಚ್ಚಳವಾಗುವ ಸಂಭವ ಇರುವ ಕೆಲ ಕಡೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಂತೆ ತ್ರಿಪುರಾ ರಾಜ್ಯದಲ್ಲಿ ಈಗಾಗಲೇ ಎಸ್ಸೆಮ್ಮೆಸ್ ಮತ್ತು ಇಂಟರ್ನೆಟ್ ಸೇವೆಯನ್ನು ಹಿಂಪಡೆಯಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತ್ರಿಪುರಾ ಸರ್ಕಾರ ಮಾಹಿತಿ ನೀಡಿದೆ.
ತ್ರಿಪುರಾದಂತೆ ಬೇರೆ ಈಶಾನ್ಯ ರಾಜ್ಯಗಳಲ್ಲೂ ಬಂದ್ಗೆ ಬೆಂಬಲ ಸಿಕ್ಕಿದೆ. ಅಸ್ಸಾಮ್ ರಾಜಧಾನಿ ಗುವಾಹತಿಯ ಅನೇಕ ಕಡೆ ಬೃಹತ್ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ಅಸ್ಸಾಮ್ನಲ್ಲಿ ರೈಲು ಸೇವೆಗೂ ಧಕ್ಕೆ ಆಗಿದೆ. ಹಲವು ಕಡೆ ವಾಹನಗಳಿಗೆ ಬೆಂಕಿ ಹಚ್ಚಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತ್ರಿಪುರಾ ಹಾಗೂ ಅಸ್ಸಾಂನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಪರಿಸ್ಥಿತಿ ನಿಯಂತ್ರಿಸಲು ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ಈ ಮಧ್ಯೆ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಪೌರತ್ವ ತಿದ್ದುಪಡಿ ಮಸೂದೆಯೂ ಸಂವಿಧಾನದ 14ನೇ ವಿಧಿಯ ಉಲ್ಲಂಘನೆ ಮಾಡಿದೆ ಎಂದು ಸುಪ್ರೀಂಕೋರ್ಟ್ಗೆ ಹೇಳಿದೆ. “ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನಡಿ ಸಮಾನ ರಕ್ಷಣೆ ನೀಡಬೇಕೆಂದು ಭಾರತ ಸಂವಿಧಾನದ 14ನೇ ವಿಧಿಯಲ್ಲಿ ಹೇಳಲಾಗಿದೆ. ಆದರೀಗ ಕೇಂದ್ರ ಸರ್ಕಾರ ಜಾರಿಗೆ ಮುಂದಾದ ಪೌರತ್ವದ ತಿದ್ದುಪಡಿ ಮಸೂದೆಯೂ ಇದಕ್ಕೆ ವ್ಯತಿರಿಕ್ತವಾಗಿದೆ” ಎಂದು ನ್ಯಾಯಪೀಠದ ಮುಂದೆ ಕಾಂಗ್ರೆಸ್ ಪ್ರಸ್ತಾಪಿಸಿದೆ.
Click this button or press Ctrl+G to toggle between Kannada and English