ಮಂಗಳೂರು : ಮಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟವರು ಅಂದು ನಡೆದ ಹಿಂಸಾಚಾರ ಪ್ರಕರಣದ ಆರೋಪಿಗಳಾಗಿದ್ದರೆ ಸಂತ್ರಸ್ತ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಗೋಲಿಬಾರ್‌ಗೆ ಬಲಿಯಾದವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಬಲಿಯಾದವರು ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದ್ದರಿಂದ ಸದ್ಯ 1 ರೂ. ಪರಿಹಾರ ಕೂಡಾ ಕೊಡಲಾಗದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಡಿ.22ರಂದು ಮಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೋಲಿಬಾರ್‌ಗೆ ಬಲಿಯಾದವರ ಕುಟುಂಬಸ್ಥರು ತನ್ನನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡರೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡೇಟಿಗೆ ಬಲಿಯಾದ ಎರಡು ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದರು.
ಇದೇ ವಿಚಾರವಾಗಿ ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ, ಗೋಲಿಬಾರ್‌ಗೆ ಬಲಿಯಾದವರಿಗೆ ಸರಕಾರ ಪರಿಹಾರ ಘೋಷಿಸಿದ್ದು ಮಾತ್ರ ನೀಡಿಲ್ಲ. ಅವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಡಿ.19ರಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಅಬ್ದುಲ್ ಜಲೀಲ್ ಮತ್ತು ನೌಶೀನ್ ಎಂಬವರು ಬಲಿಯಾಗಿದ್ದರು.
Click this button or press Ctrl+G to toggle between Kannada and English