ಮಡಿಕೇರಿ : ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಪೊಲೀಸ್ ಗೋಲಿಬಾರ್‌ಗೆ ಸಿಲುಕಿ ಸಾವನ್ನಪ್ಪಿರುವ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ಘೋಷಿಸಲಾಗಿದ್ದ 10 ಲಕ್ಷ ರೂ. ಪರಿಹಾರವನ್ನು ಹಿಂಪಡೆಯಲು ಮುಖ್ಯಮಂತ್ರಿಗಳು ಮುಂದಾಗುವ ಮೂಲಕ ಬಿಜೆಪಿ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎನ್ನುವುದನ್ನು ಸಾಬೀತು ಪಡಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿ ಇದೀಗ ಅದನ್ನು ಹಿಂಪಡೆಯುವ ಪ್ರಯತ್ನಕ್ಕೆ ಕೆಲವು ಮತೀಯ ಸಂಘಟನೆಗಳ ಮಾತು ಕೇಳಿ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಇದು ಖಂಡನೀಯವಾಗಿದ್ದು, ಬಿಜೆಪಿಯ ಜನವಿರೋಧಿ ನಡೆಗಳಿಗೆ ರಾಜ್ಯದ ಜನತೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದರು.
ಕೇವಲ ಸಂಖ್ಯಾಬಲ ಇದೆ ಎನ್ನುವ ಕಾರಣದಿಂದ ಜನವಿರೋಧಿಯಾದ ಸಿಎಎ ಮತ್ತು ಎನ್‌ಆರ್‌ಸಿಗಳನ್ನು ಜಾರಿಗೊಳಿಸಲು ಮುಂದಾಗುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ. ಆ ಮೂಲಕ ಸಮಾಜದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಟಿಸಿದೆ ಎಂದು ಟೀಕಿಸಿದರು.
ಮಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಲು ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳೇ ಕಾರಣವಾಗಿದೆ ಎಂದು ಆರೋಪಿಸಿದ ಈಶ್ವರ ಖಂಡ್ರೆ, ಕೇಂದ್ರ ಸರ್ಕಾರ ತನ್ನ ಜನವಿರೋಧಿ ನೀತಿಗಳಿಂದ ರಾಷ್ಟ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಿದೆ. ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳು ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ಆಗಬೇಕು. ಆದರೆ, ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಯ ಮೂಲಕ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವ ಪ್ರಯತ್ನಗಳಿಗೆ ಮುಂದಾಗಿದೆ ಎಂದು ಆರೋಪಿಸಿದರು.
ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಸುಳ್ಳು ವಿಡಿಯೋ ಕ್ಲಿಪ್ಪಿಂಗ್ ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದ ಈಶ್ವರ ಖಂಡ್ರೆ, ಒಟ್ಟು ಘಟನೆಯ ಸತ್ಯಾಸತ್ಯತೆಯನ್ನು ನ್ಯಾಯಾಂಗ ತನಿಖೆಯ ಮೂಲಕ ಮಾತ್ರ ಕಂಡುಕೊಳ್ಳಲು ಸಾಧ್ಯವೆಂದು ಅಭಿಪ್ರಾಯಪಟ್ಟರು.
Click this button or press Ctrl+G to toggle between Kannada and English