ಕಾರ್ಮಿಕ ವರ್ಗದ ಒಗ್ಗಟ್ಟಿನ ಪ್ರತಿಭಟನೆ : ಕೊಡಗಿನ ಜನಜೀವನಕ್ಕೆ ತೊಂದರೆ ನೀಡದ ಮುಷ್ಕರ

11:02 AM, Thursday, January 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

bank

ಮಡಿಕೇರಿ : ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾರ್ಮಿಕರ 18 ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದವು.

ಮುಷ್ಕರಕ್ಕೆ ಜಿಲ್ಲೆಯ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದವಾದರೂ, ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಆದರೆ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ವಿವಿಧೆಡೆಗಳಲ್ಲಿ ಜನಸಂಚಾರ ವಿರಳವಾಗಿತ್ತು.

ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಆದರೆ ಸರ್ಕಾರಿ ಆಸ್ಪತ್ರೆ ಗುತ್ತಿಗೆ ನೌಕರರು, ಅಂಗನವಾಡಿ, ಬಿಸಿಯೂಟ ಸಿಬ್ಬಂದಿ, ಬಿಎಸ್‌ಎನ್‌ಎಲ್ ಗುತ್ತಿಗೆ ನೌಕರರು, ಎಲ್‌ಐಸಿ ಸಿಬ್ಬಂದಿ, ಕಟ್ಟಡ ಕಾರ್ಮಿಕರು, ಕೆಲವು ಕಾಫಿ ತೋಟದ ಕಾರ್ಮಿಕರು, ಹಮಾಲಿ ಕಾರ್ಮಿಕರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಂಡರು.

ಭಾರತೀಯ ಸ್ಟೇಟ್ ಬ್ಯಾಂಕ್ ಹೊರತುಪಡಿಸಿ ಉಳಿದ ಬ್ಯಾಂಕ್‌ಗಳು ಮುಷ್ಕರಕ್ಕೆ ಬೆಂಬಲ ನೀಡಿ ಸೇವೆಯನ್ನು ಸ್ಥಗಿತಗೊಳಿಸಿದ್ದವು.

ಪ್ರತಿಭಟನಾ ಮೆರವಣಿಗೆ: ಬುಧವಾರ ಪೂರ್ವಾಹ್ನ ನಗರದ ಸುದರ್ಶನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಇಂಟಕ್, ಎಐಟಿಯುಸಿ, ಸಿಐಟಿಯು, ಟಿಯುಸಿಸಿ, ಎಐಯುಟಿಯುಸಿ, ಎಲ್‌ಐಸಿ, ಜೆಸಿಟಿಯು ಸಂಘಟನೆಗಳ ಸದಸ್ಯರು, ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಮತ್ತು ಇನ್ನಿತರ ವಿಭಾಗದ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ, ಬಿಎಸ್‌ಎನ್‌ಎಲ್ ಗುತ್ತಿಗೆ ನೌಕರರು, ಎಲ್‌ಐಸಿ ಸಿಬ್ಬಂದಿ, ಕಟ್ಟಡ ಕಾರ್ಮಿಕರು, ಕಾಫಿ ತೋಟ ಕಾರ್ಮಿಕರು, ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ವರ್ಗದ ಕಾರ್ಮಿಕರು ಭಾಗವಹಿಸಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English