ಮಡಿಕೇರಿ : ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಕೊಡಗು ಜಿಲ್ಲೆಯಲ್ಲೂ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು, ಸಮಾನ ಮನಸ್ಕ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಬೃಹತ್ ಪ್ರತಿಭಟನೆಗಳು ನಡೆಸಿದ್ದಾರೆ. ಆದರೆ ಕೊಡಗಿನಲ್ಲಿ ಕಾಯ್ದೆ ವಿರುದ್ಧ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿಲ್ಲವೆಂದು ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಬಿಜೆಪಿ ನೇತೃತ್ವದ ಸರ್ಕಾರ ನಿರಂತರವಾಗಿ ಜನವಿರೋಧಿ ನೀತಿಗಳನ್ನು ಹೇರುತ್ತಾ ಬರುತ್ತಿದ್ದರು ಎಲ್ಲವನ್ನೂ ಸಹಿಸಿಕೊಂಡು ಕೂರಲು ಜಿಲ್ಲೆಯ ಜನ ತಯಾರಿಲ್ಲವೆಂದು ಹೇಳಿದ್ದಾರೆ. ಕೊಡಗಿನವರು ಪ್ರಜ್ಞಾವಂತರಾಗಿರುವ ಕಾರಣ ಶಾಂತಿ ಕಾಪಾಡಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಶಾಸಕರು ಸಿಎಎ ವಿರುದ್ಧದ ಹೋರಾಟವನ್ನು ನಿರ್ಲಕ್ಷ್ಯ ಮನೋಭಾವದಿಂದ ಕಂಡಿದ್ದಾರೆ ಮತ್ತು ಜನರ ಹಾದಿ ತಪ್ಪಿಸುವ ಯತ್ನ ಮಾಡಿದ್ದಾರೆ ಎಂದು ಸುರೇಶ್ ಟೀಕಿಸಿದ್ದಾರೆ.
ಪೌರತ್ವ ಕಾಯ್ದೆ ವಿರುದ್ಧ ಮಾತ್ರವಲ್ಲದೆ ಜನವಿರೋಧಿ ನೀತಿಗಳ ವಿರುದ್ಧವೂ ಜಿಲ್ಲೆಯ ಜನರು ಜಾತ್ಯತೀತ ಮತ್ತು ಪಕ್ಷಾತೀತವಾಗಿ ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದ್ದು, ಇದು ಕೇವಲ ಮುಸಲ್ಮಾನರ ಹೋರಾಟವಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಜ. 11ರಂದು ಪ್ರಗತಿಪರ ಜನಾಂದೋಲನ ವೇದಿಕೆಯ ವತಿಯಿಂದ ಬಿಜೆಪಿಯೇತರ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಹಾಗೂ ಪ್ರಗತಿಪರ ಚಿಂತಕರು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಸುರೇಶ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English