ಕೊಡಗನ್ನು ಮೊದಲ ಸ್ಥಿತಿಗೆ ತರಲು ಎಷ್ಟು ಬೇಕಾದರೂ ಹಣ ನೀಡಲು ಸಿದ್ಧ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

11:34 AM, Tuesday, January 28th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

BSY

ಮಡಿಕೇರಿ : ಪ್ರಾಕೃತಿಕ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯನ್ನು ಮೊದಲ ಸ್ಥಿತಿಗೆ ತರಲು ಎಷ್ಟು ಬೇಕಾದರು ಹಣವನ್ನು ನೀಡಲು ಸಿದ್ಧ ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೂ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

BSY

ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿಯಿಂದ ಅಪಾರ ನಷ್ಟ ಉಂಟಾಗಿದ್ದು, 2333 ಮನೆಗಳು ಹಾನಿಗೀಡಾಗಿವೆ. ಸಂತ್ರಸ್ತರಿಗೆ ನೂತನ ಮನೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 250 ಮನೆಗಳು ಪೂರ್ಣಗೊಂಡಿವೆ, 200 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯ ಸರ್ಕಾರ 100 ಕೋಟಿ ಹಾಗೂ ಎನ್‌ಡಿಆರ್‌ಎಫ್ ಮೂಲಕ 10 ಕೋಟಿ ರೂಗಳನ್ನು ನೀಡಲಾಗಿದೆ. ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲಾ ನೆರವನ್ನು ನೀಡಲಿದೆಯೆಂದು ತಿಳಿಸಿದರು.

ಅತಿವೃಷ್ಟಿ ಹಾನಿ ಸಂಕಷ್ಟದಿಂದ ಕೊಡಗು ಜಿಲ್ಲೆ ಹೊರ ಬಂದು ಮೊದಲಿನಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇದಕ್ಕೆ ಎಷ್ಟು ಹಣ ಬೇಕಾದರು ನೀಡಲು ಸಿದ್ಧರಿದ್ದೇವೆ. ಇದರೊಂದಿಗೆ ಪ್ರವಾಸೋದ್ಯಮಕ್ಕೆ ಪೂರಕ ವಾತಾವರಣ ಇರುವುದರಿಂದ ಈ ಕ್ಷೇತ್ರದ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಜಿಲ್ಲೆಯ ಜನರ ಅಪೇಕ್ಷೆಯಂತೆ 450 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಕಟ್ಟಡದ ನಿರ್ಮಾಣ ಮಾತ್ರವಲ್ಲದೆ, ಉತ್ತಮ ರೀತಿಯ ನಿರ್ವಹಣೆಗೂ ಆದ್ಯತೆ ನೀಡಲಾಗುವುದೆಂದು ಮುಖ್ಯಮಂತ್ರಿಗಳು ಹೇಳಿದರು.

ಆರೋಗ್ಯ, ಕೃಷಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡುತ್ತಿದ್ದು, ಎಲ್ಲರಿಗೂ ಆರೋಗ್ಯ ನೀಡುವ ಗುರಿ ಹೊಂದಲಾಗಿದೆ. ಕೇಂದ್ರ್ರ ಸರ್ಕಾರದ ನೆರವಿನಿಂದ ಈಗಾಗಲೆ ಹಾವೇರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿಗಳಲ್ಲಿ ವೈದ್ಯಕೀಯ ಕಾಲೇಜಿನ ಕೆಲಸ ಆರಂಭಿಸಲಾಗಿದ್ದು, ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

BSY

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಣೆಗೊಳಿಸಿ ಬಡವರಿಗೆ ಕೂಡ ಗುಣ ಮಟ್ಟದ ಚಿಕಿತ್ಸೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಆರೋಗ್ಯ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದರು.

’ಟೆಲಿ ಕನ್ಸಲ್ಟೇಷನ್’ ಮೂಲಕ ಆರೋಗ್ಯ ಸೌಲಭ್ಯ : ಸಚಿವ ಡಾ. ಅಶ್ವಥ್ ನಾರಾಯಣ ಭರವಸೆ
ಉಪ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ನೂತನ ತಂತ್ರಜ್ಞಾನದ ಮೂಲಕ ಸುಲಭ ಮತ್ತು ಸರಳವಾಗಿ ರೋಗಿಗಳಿಗೆ ಆರೋಗ್ಯ ಸೌಲಭ್ಯ ದೊರೆಯುವಂತೆ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ’ಟೆಲಿ ಮೆಡಿಸಿನ್’ ವ್ಯವಸ್ಥೆಯನ್ನು ಅದಾಗಲೆ ಜಾರಿಗೊಳಿಸಲಾಗಿದ್ದು, ಇದರೊಂದಿಗೆ ’ಟೆಲಿ ಕನ್ಸಲ್ಟೇಷನ್’ ಮಾಡುವ ಮೂಲಕ ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಆರೋಗ್ಯ ಸೌಲಭ್ಯವನ್ನು ಒದಗಿಸುವ ಚಿಂತನೆ ತಮ್ಮದಾಗಿದೆ ಎಂದರು.

ಕೊಡಗು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ಪ್ರಯತ್ನ ಮಾಡಲಾಗುವುದೆಂದು ಭರವಸೆ ನೀಡಿದ ಅಶ್ವಥ್ ನಾರಾಯಣ್, ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಡಿಕೇರಿಯ ಮೆಡಿಕಲ್ ಕಾಲೇಜಿನ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದಾಗಿ ತಿಳಿಸಿದ ಅವರು, 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ತ್ವರಿತವಾಗಿ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಳೆದ ಬಾರಿ ಬಿಜೆಪಿ ಅಧಿಕಾರದಲ್ಲಿದ್ದಾಗ ವೈದ್ಯಕೀಯ ಕಾಲೇಜು ನೀಡಲಾಗಿತ್ತು. ಇದೀಗ ಹೆಚ್ಚುವರಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆಯೆಂದರು.

BSY

ಕೊಡಗಿಗೆ ಮೊದಲ ಸ್ಥಾನ : ಉಸ್ತುವಾರಿ ಸಚಿವಾ ವಿ.ಸೋಮಣ್ಣ ವಿಶ್ವಾಸ
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾತನಾಡಿ, ಕರ್ನಾಟಕದ ಕಾಶ್ಮೀರವೆಂದೇ ಹೆಸರಾಗಿರುವ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪದ ಹಿನ್ನೆಲೆ 442 ಕೋಟಿ ರೂ.ಗಳಿಗೆ ಮಂಜೂರಾತಿಯನ್ನು ನೀಡಲಾಗಿದ್ದು, ಇದರಲ್ಲಿ 100ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಈಗಾಗಲೆ 332ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ವಸತಿ ಇಲಾಖೆಗೆ ಮನೆಗಳ ನಿಮಾಣಕ್ಕಾಗಿ 135 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಹದಗೆಟ್ಟ 3067ಕಿ.ಮೀ. ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆಯೆಂದು ಹೇಳಿದರು.

ಪ್ರಸಕ್ತ ಸಾಲಿನ ಮಾರ್ಚ್ 30 ರ ಒಳಗೆ 800 ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಲಾಗುವುದೆಂದರು. ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಆಗುತ್ತಿರುವ ಅಡ್ಡಿಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಸಚಿವ ವಿ.ಸೋಮಣ್ಣ, ಅಭಿವೃದ್ಧಿಯಲ್ಲಿ ಕೊಡಗನ್ನು ಮೊದಲ ಸ್ಥಾನಕ್ಕೆ ಏರಿಸುವುದಾಗಿ ಭರವಸೆ ನೀಡಿದರು.

ಕುಮಾರಸ್ವಾಮಿ ಜನರು ನೀಡಿದ ಹಣ ನೀಡಿದ್ದಾರೆ : ಸಂಸದ ಪ್ರತಾಪ್ ಸಿಂಹ
ಸಂಸದ ಪ್ರತಾಪ ಸಿಂಹ ಮಾತನಾಡಿ, ಕೊಡಗಿನಿಂದ ಹರಿಯುವ ಕಾವೇರಿ ನದಿ ನೀರಿನಿಂದಾಗಿ ಈ ಜಿಲ್ಲೆ ಬೆಂಗಳೂರಿಗೆ ಕಾಮಧೇನುವಾಗಿದೆ. ಇಂತಹ ಕೊಡಗು ಜಿಲ್ಲೆಗೆ ಸರ್ಕಾರ ಅಗತ್ಯ ಸ್ಪಂದನೆ ನೀಡುವ ಮೂಲಕ ಅಭಿವೃದ್ಧಿಗೊಳಿಸಲಿದೆ. ಮಳೆಹಾನಿಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲು ಅನುದಾನ ಬಿಡುಗಡೆ ಮಾಡಿದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಅವರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನರು ದೇಣಿಗೆ ರೂಪದಲ್ಲಿ ನೀಡಿದ ಹಣವನ್ನು ಮನೆ ನಿರ್ಮಾಣಕ್ಕಾಗಿ ತಲಾ 9.50ಲಕ್ಷ ರೂ.ಗಳಂತೆ ಹಂಚಿಕೆ ಮಾಡಿದ್ದಾರೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಹಣವನ್ನು ಮನೆಗಾಗಿ ಮಂಜೂರು ಮಾಡಿದ್ದಾರೆ ಎಂದರು.

ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಎರಡು ವರ್ಷಗಳ ಕಾಲ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಕಾಡಿದ್ದು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಮೂರೇ ದಿನಗಳಲ್ಲಿ ಸಂತ್ರಸ್ತರಿಗೆ ಪರಿಹಾರವನ್ನು ಬಿಡುಗಡೆ ಮಾಡಿದ್ದಾರೆ. ಕೆಲಸ ಮಾಡಲು ಸಮಯಾವಕಾಶ ಸಿಗದಷ್ಟು ದೊಡ್ಡ ಮೊತ್ತದಲ್ಲಿ ಅನುದಾನವನ್ನು ನೀಡಿದ್ದಾರೆ ಮತ್ತು ಭೂ ಪರಿವರ್ತನೆ, ಭತ್ತ ಖರೀದಿಗೂ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಬೋಪಯ್ಯ ತಿಳಿಸಿದರು.

BSY

ನದಿ ಹೂಳೆತ್ತಲು ಸಹಕಾರ ನೀಡಿ : ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ ಶಾಸಕ ಅಪ್ಪಚ್ಚುರಂಜನ್
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಸಿ ಮತ್ತು ಡಿ ದರ್ಜೆಯ 1 ಲಕ್ಷ ಹೆಕ್ಟೇರ್ ಭೂಮಿಯನ್ನು ಜಮೀನು ಮಂಜೂರಾತಿಗೆ ಅರ್ಜಿ ಸಲ್ಲಿಸಿದವರಿಗೆ ಹಂಚಿಕೆ ಮಾಡಬೇಕು. ಫಾರಂ ನಂ57, 94 ಸಿ ಮತ್ತು 94 ಸಿಸಿ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಿಸಬೇಕು, ನದಿ ಮತ್ತು ಹೊಳೆಯಲ್ಲಿ ಹೂಳು ತುಂಬಿರುವುದರಿಂದ ಸಣ್ಣ ಮಳೆಗೂ ಪ್ರವಾಹ ಏರ್ಪಡುತ್ತಿದ್ದು, ತಕ್ಷಣ ಹೂಳೆತ್ತಲು ಸಹಕಾರ ನೀಡಬೇಕು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದರು.

ಜಿಲ್ಲೆಗೆ ಮೆಡಿಕಲ್ ಕಾಲೇಜು, ಸೈನಿಕ ಶಾಲೆಯನ್ನು ನೀಡಿದ ಹೆಗ್ಗಳಿಕೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರದ್ದೆಂದು ಮೆಚ್ಚುಗೆ ವ್ಯಕ್ತಪಡಿಸಿದ ಅಪ್ಪಚ್ಚು ರಂಜನ್, ಕಳೆದ ಬಾರಿ ಸರ್ಕಾರವಿದ್ದಾಗ ಬಿಜೆಪಿ ಸರ್ಕಾರದಿಂದ 1800ಕೋಟಿ ಅನುದಾನ ಬಂದಿದೆ ಎಂದರು. ಅತಿವೃಷ್ಟಿಯಿಂದ ಸಂಕಷ್ಟವಿದ್ದಾಗ ಮುಖ್ಯ ಮಂತ್ರಿಗಳು 536ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿ, 100ಕೋಟಿ ರೂ.ಗಳನ್ನು ಈಗಾಗಲೆ ಬಿಡುಗಡೆ ಮಾಡಿದ್ದಾರೆ ಎಂದರು.

ಶಾಸಕ ಅಪ್ಪಚ್ಚು ರಂಜನ್ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಬೆಂಗಳೂರಿಗೆ ಹೋದ ತಕ್ಷಣ ಬೇಡಿಕೆಗಳ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿಪಂ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪೆಕ್ಕಡೆ ಶೋಭಾ ಮೋಹನ್, ಜಿಪಂ ಸದಸ್ಯೆ ಕೆ.ಪಿ. ಚಂದ್ರಕಲಾ , ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಪಂ ಸಿಇಒ ಲಕ್ಷ್ಮೀ ಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ.ಕೆ.ಬಿ.ಕಾರ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English